ಬೆಂಗಳೂರು: ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗಾಗಿ ಬೆಂಗಳೂರು ಪೊಲೀಸರು ನಡೆಸಿದ ‘ಆಪರೇಷನ್ ಮುಕ್ತಾ’ ಕಾರ್ಯಾಚರಣೆಯಲ್ಲಿ 31 ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.
ಹೌದು. ಅಕ್ರಮವಾಗಿ ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳ ಪತ್ತೆಗಾಗಿ ಬೆಂಗಳೂರು ಪೊಲೀಸರು ನಡೆಸಿದ ‘ಆಪರೇಷನ್ ಮುಕ್ತಾ’ ಕಾರ್ಯಾಚರಣೆಯಲ್ಲಿ ಸುಮಾರು 1,000 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ವೇಳೆ ಅವರ ದಾಖಲೆಗಳನ್ನು ಪರಿಶೀಲಿಸಿದಾಗ 31 ಮಂದಿ ಅಕ್ರಮವಾಗಿ ಭಾರತ ಪ್ರವೇಶಿಸಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳು ಎಂಬುದು ಬೆಳಕಿಗೆ ಬಂದಿದೆ.
ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದ ವ್ಯಕ್ತಿಗಳ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ 31 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಲಾಗಿದೆ.
31 ಬಾಂಗ್ಲಾ ಪ್ರಜೆಗಳು ಗಡಿಪಾರು
ವಶಕ್ಕೆ ಪಡೆದ 31 ಮಂದಿಯನ್ನು ರೈಲಿನ ಮೂಲಕ ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಅಲ್ಲಿ ಅವರನ್ನು ಗಡಿ ಭದ್ರತಾ ಪಡೆ (BSF) ಅಧಿಕಾರಿಗಳಿಗೆ ಹಸ್ತಾಂತರಿಸಲಾಗುತ್ತದೆ. ಬಳಿಕ ಕಾನೂನುಬದ್ಧ ಪ್ರಕ್ರಿಯೆಯಂತೆ ಅವರನ್ನು ಬಾಂಗ್ಲಾದೇಶಕ್ಕೆ ಕಳುಹಿಸುವ (ಡಿಪೋರ್ಟ್) ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ರಮ ವಲಸಿಗರ ಪತ್ತೆಗಾಗಿ ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿಯೂ ದಾಖಲೆಗಳ ಪರಿಶೀಲನೆ ಹಾಗೂ ಶೋಧ ಕಾರ್ಯಾಚರಣೆ ನಡೆಯುವ ಸಾಧ್ಯತೆಯಿದೆ. ಅಕ್ರಮ ವಲಸಿಗರ ಪತ್ತೆ ಹಾಗೂ ದಾಖಲೆಗಳ ಪರಿಶೀಲನೆ ಕಾರ್ಯಾಚರಣೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

