ಭೋಪಾಲ್: ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಮೂಲದ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಬಸ್ ಅಪಘಾತದಲ್ಲಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ರವಿ ಕೆ.ಬಿ ಮೃತ ಇನ್ಸ್ ಪೆಕ್ಟರ್. ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್ ರವಿ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ರವಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ರವಿ ಕೆ.ಬಿ., ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಪೊಲೀಸ್ ತಂಡದೊಂದಿಗೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರವಿ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಪಿಎಸ್‌ಐ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

