ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 22ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 23,04,003 ಮತದಾರರು ದಾಖಲಾಗಿದ್ದಾರೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಕಾಂತರಾಜು ಪಿ.ಎಸ್ ತಿಳಿಸಿದ್ದಾರೆ.
ಜಿಲ್ಲೆಯ ಒಟ್ಟು ಮತದಾರರ ಪೈಕಿ 11,29,576 ಪುರುಷರು, 11,74,151 ಮಹಿಳೆಯರು ಹಾಗೂ 276 ತೃತೀಯ ಲಿಂಗದ ಮತದಾರರು ಇದ್ದಾರೆ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಡಿ ಸೆಪ್ಟೆಂಬರ್ 22ರವರೆಗೆ ಜಿಲ್ಲೆಯಲ್ಲಿ ಒಟ್ಟು 9,45,752 ನೋಟಿಸ್ ಗಳನ್ನು ಸಿದ್ದಪಡಿಸಲಾಗಿದೆ. ಈ ಪೈಕಿ 7,69,933 ನೋಟಿಸ್ ಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, 1,75,819 ನೋಟಿಸ್ಗಳು ಇನ್ನೂ ವಿತರಣೆಯಾಗಬೇಕಿವೆ. ಒಟ್ಟಾರೆ ಶೇ.81.40ರಷ್ಟು ನೋಟಿಸ್ಗಳನ್ನು ವಿತರಿಸಲಾಗಿದೆ.
ವಿತರಿಸಲಾದ ನೋಟಿಸ್ ಗಳಿಗೆ ಸಂಬಂಧಿಸಿದ ವಿಚಾರಣೆಗಳಲ್ಲಿ ಶೇ.61.23 ರಷ್ಟು ಅಂದರೆ 4,71,488 ವಿಚಾರಣೆಗಳು ಪೂರ್ಣಗೊಂಡಿವೆ. ಇನ್ನೂ 2,98,445 ವಿಚಾರಣೆಗಳು ಬಾಕಿ ಉಳಿದಿವೆ ಎಂದು ತಿಳಿಸಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯಡಿ ಕೊನೆಯ ವಿಚಾರಣೆಯನ್ನು ಅಕ್ಟೋಬರ್ 12, 2026ರಂದು ನಡೆಸಲಾಗುವುದು. ಕ್ಲೇಮ್ ಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ನೋಟಿಸ್ ಹಂತದ ಪ್ರಕ್ರಿಯೆ ಪೂರ್ಣಗೊಳಿಸಲು ಅಕ್ಟೋಬರ್ 22, 2026 ಕೊನೆಯ ದಿನಾಂಕವಾಗಿರುತ್ತದೆ.
ನೋ ಮ್ಯಾಪಿಂಗ್ ಮತ್ತು ಅನಾಮಲಿಸ್ ವಿಭಾಗಗಳಡಿ ನೋಟಿಸ್ ಗಳನ್ನು ಪಡೆದಿರುವ ವ್ಯಕ್ತಿಗಳ ಪಟ್ಟಿಯನ್ನು ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಕೋರಿಕೆಯ ಮೇರೆಗೆ ಸೆಪ್ಟೆಂಬರ್ 5, 2026 ರಂದು ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ.
ಸೆಪ್ಟೆಂಬರ್ 21ರವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಾದ ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಧಾನಸಭಾ ಕ್ಷೇತ್ರವಾರು ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು. ಫಾರಂ 9, 10, 11, 11ಎ ಹಾಗೂ 11ಬಿ ಮೂಲಕ ಸಲ್ಲಿಸಲಾದ ಅರ್ಜಿಗಳ ವಿವರಗಳನ್ನು ಸಾರ್ವಜನಿಕರು ಪರಿಶೀಲಿಸಬಹುದಾಗಿದೆ.
ಹಿರಿಯ ನಾಗರಿಕರು, ಅಂಗವಿಕಲರು, ಅನಾರೋಗ್ಯಪೀಡಿತರು ಹಾಗೂ ವಿದೇಶದಲ್ಲಿರುವ ಮತದಾರರ ಪರವಾಗಿ ಅವರ ವಯಸ್ಕ ಕುಟುಂಬದ ಸದಸ್ಯರು ಚುನಾವಣಾ ನೋಂದಣಿ ಅಧಿಕಾರಿ (ERO) ಅಥವಾ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ (AERO) ಮುಂದೆ ಹಾಜರಾಗಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಮಹರ್ಷಿ ವಾಲ್ಮೀಕಿ ಜಯಂತಿ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ ಶ್ರಮಿಸಿ, ಗಣನಿಯ ಸೇವೆ ಸಲ್ಲಿಸಿದ ಅರ್ಹ ಸಾಧಕರನ್ನು ಗರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲು ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಉತ್ತರ ತಾಲ್ಲೂಕು (ಯಲಹಂಕ) ಕಚೇರಿ ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 24 ರೊಳಗೆ ಸಲ್ಲಿಸಬಹುದು. ಎಂದು ಬೆಂಗಳೂರು ಉತ್ತರ (ಯಲಹಂಕ), ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

