ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಕೇವಲ ಒಂದು ಗಂಟೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಗೆ ಒಟ್ಟು 9 ಜನರು ಮೃತಪಟ್ಟಿದ್ದಾರೆ. ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಬೆಂಗಳೂರಿನಲ್ಲಿ ಇಂದೂ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದ್ದು, ಬೆಂಗಳೂರಿಗರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಕೋಲಾರ, ಯಾದಗಿರಿ, ಗದಗ , ರಾಯಚೂರು, ಬಾಗಲಕೋಟೆ, ಕೊಪ್ಪಳ, ಧಾರವಾಡ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಖೆ ತಿಳಿಸಿದೆ.
ಇನ್ನು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಬಿಸಿಗಾಳಿ ಹಾಗೂ ತೇವಾಂಶದ ವಾತಾವರಣ ಇರಲಿದೆ. ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ.

