ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಲುರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ವರ್ತೂರು ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದ್ದು, ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು ವ್ಯಕ್ತಿಗಳು ನಮ್ಮ ಊರಿಗೆ ಬಂದು ವೇಶ್ಯಾವಾಟಿಕೆ ನಡೆಸುತ್ತೀರಾ? ಎಂದು ದಾಳಿ ಮಾಡಿದ್ದಾರೆ. ಮಹಿಳೆಯನ್ನು ಮನೆಯಿಂದ ಹೊರಕ್ಕೆ ಎಳೆದು ತಂದು ಮನಬಂದಂತೆ ಥಳಿಸಿದ್ದಾರೆ. ಗಲಾಟೆ ಆರಂಭವಾಗುತ್ತಿದ್ದಂತೆಯೇ ಆಕೆಯ ಜೊತೆಗಿದ್ದ ಯುವಕ ಸ್ಥಳದಿಂದ ಓಡಿ ಹೋಗಿದ್ದಾನೆ.
ಹಲ್ಲೆಗೊಳಗಾದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ವರ್ತೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

