ಬೆಂಗಳೂರು: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು ಮತ್ತು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಅವರು ತಿಳಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಸಚಿವರಾದ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2026-27ನೇ ಸಾಲಿನ ಮುಂಗಾರು ಹಂಗಾಮಿಗೆ ನೀರು ಹರಿಸುವ ಕುರಿತು 89ನೇ ನೀರಾವರಿ ಸಲಹಾ ಸಮಿತಿ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಇಂದಿನ ಸಭೆಯಲ್ಲಿ ಪ್ರಸ್ತುತ ಜಲಾಶಯದ ನೀರಿನ ಸ್ಥಿತಿಗತಿ, ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೆಳೆಗಳ ವಿವರ ಹಾಗೂ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಸಚಿವರು, ಶಾಸಕರು ಹಾಗೂ ರೈತ ಮುಖಂಡರ ಅಭಿಪ್ರಾಯಗಳನ್ನು ತಿಳಿದುಕೊಂಡಿದ್ದೇನೆ. ಈ ಕ್ಷಣದಲ್ಲೇ ನೀರು ಹರಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳ ಜೊತೆ ಶೀಘ್ರವಾಗಿ ಚರ್ಚಿಸಿ ಉತ್ತಮ ತೀರ್ಮಾನಕ್ಕೆ ಬರಲಾಗುವುದು ಎಂದು ಭರವಸೆ ನೀಡಿದರು.
ಕುಡಿಯುವ ನೀರಿಗೆ ಮೊದಲ ಆದ್ಯತೆ
ಒಳ್ಳೆಯ ಸಂಗತಿ ಎಂದರೆ ಈಗ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಅದಕ್ಕಾಗಿಯೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯನ್ನು ತುರ್ತಾಗಿ ಕರೆಯಲು ಸೂಚಿಸಿದ್ದೆ. ಈಗ ಎಲ್ಲರೂ ನಿಮ್ಮ ಅಭಿಪ್ರಾಯಗಳನ್ನು ಹೇಳಿದ್ದೀರಿ. ಇದನ್ನೆಲ್ಲ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಆದರೆ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಇದೇ ನಮ್ಮ ಸರ್ಕಾರದ ಮೊದಲ ಆದ್ಯತೆ. ನಮಗೆ ಸರಿಯಾದ ಅಂಕಿ-ಅಂಶಗಳನ್ನು ಕೊಡಲು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೂ ಸೂಚಿಸುತ್ತೇನೆ. ಆ ಅಂಕಿ-ಅಂಶ ಮುಂದಿಟ್ಟುಕೊಂಡು ಏನು ಉತ್ತಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆಯೋ ಅದನ್ನು ಮಾಡುತ್ತೇವೆ ಎಂದು ಸಚಿವರು ಹೇಳಿದರು.
ಮುಂಗಾರು ಮಳೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಮಳೆ ನಂಬಿ ಬಿತ್ತನೆ ಮಾಡಬೇಡಿ ಎಂದು ಕೋರಿದ್ದರು. ಆದರೂ ಕೆಲವು ಭಾಗದಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಇದು ನಮಗೆಲ್ಲ ಧರ್ಮ ಸಂಕಟ. ಉತ್ತರ ಕರ್ನಾಟಕದಲ್ಲಿ ಉತ್ತಮ ಮಳೆಯಿಂದ ಅಣೆಕಟ್ಟುಗಳು ತುಂಬಿವೆ. ಆದರೆ ದಕ್ಷಿಣ ಕರ್ನಾಟದಲ್ಲಿ ಈ ಬಾರಿ ಅಣೆಕಟ್ಟುಗಳು ತುಂಬಿಲ್ಲ. ನಾವು ಈ ಬಗ್ಗೆಯೂ ಯೋಚಿಸಬೇಕು. ಹೀಗಾಗಿ ಜವಾಬ್ದಾರಿಯಿಂದಲೇ ನಮ್ಮ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ರೈತ ಬಂಧುಗಳ ಹಿತಾಸಕ್ತಿಯನ್ನು ಕಾಪಾಡುವುದು ನಮ್ಮ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರು ಒದಗಿಸುವ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಿ, ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಮತ್ತು ಕಾಲಮಿತಿಯೊಳಗೆ ಸೂಕ್ತ ಕ್ರಮಕೈಗೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಮುಜರಾಯಿ ಇಲಾಖೆಯ ಸಚಿವ ಕೆ.ಎಸ್. ಬಸವಂತಪ್ಪ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಡಾ.ಕೆ ಪಿ ಅಂಶುಮಂತ್, ಶಾಸಕರಾದ ಬಿ.ಕೆ. ಸಂಗಮೇಶ್, ಜಿ.ಎಚ್. ಶ್ರೀನಿವಾಸ್, ಶಾರದಾ ಪೂರ್ಯಾನಾಯ್ಕ್, ಬಿ.ಪಿ. ಹರೀಶ್, ಸಮರ್ಥ್ ಶಾಮನೂರು, ಡಿ.ಜಿ. ಶಾಂತನಗೌಡ, ಲತಾ ಮಲ್ಲಿಕಾರ್ಜುನ, ಗಾಯತ್ರಿ ಶಾಂತೇಗೌಡ ಹಾಗೂ ರೈತ ಮುಖಂಡರಾದ ಕೆ.ಟಿ ಗಂಗಾಧರಪ್ಪ, ಹೆಚ್.ಆರ್. ಬಸವರಾಜಪ್ಪ, ತೇಜಸ್ವಿ ವಿ. ಪಟೇಲ್, ದ್ಯಾವಪ್ಪರೆಡ್ಡಿ, ಹೆಚ್.ಆರ್. ಲಿಂಗರಾಜ್, ಎಂ. ತಿಪ್ಪೇರುದ್ರಪ್ಪ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

