ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಚಿಕಿತ್ಸೆ ಕೊಡಿಸುವಂತೆ ಕೋರ್ಟ್ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣ ಅಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಸಿಐಡಿ ಮುಂದೆ ಶರಣಾಗಲು ಅಹಮದಾಬಾದ್ ನಿಂದ ಬೆಂಗಳೂರಿಗೆ ಬಂದಿಳಿದ ಶಾಸಕ ಭೈರತಿ ಬಸವರಾಜ್ ಅವರನ್ನು ನಿನ್ನೆ ಸಿಐಡಿ ಪೊಲಿಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದು ಬಂಧಿಸಿದ್ದರು.
ಬಂಧಿತ ಶಾಸಕರನ್ನು ಇಂದು ಸಿಐಡಿ ಅಧಿಕಾರಿಗಳು ಬೆಂಗಳೂರಿನ 42ನೇ ಜೆಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಸಿಐಡಿ ಅಧಿಕಾರಿಗಳು ಶಾಸಕ ಭೈರತಿ ಬಸವರಾಜ್ ಅವರನ್ನು ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ. ಈ ಬಗ್ಗೆ ಭೈರತಿ ಬಸವರಾಜ್ ಪರ ವಕೀಲರು, ಭೈರ್ಅತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಅವರಿಗೆ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದ್ದಾರು.
ಈ ವೇಳೆ ನ್ಯಾಯಾಧೀಶರು, ಶಾಸಕ ಭೈರತಿ ಬಸವರಾಜ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಎಂದಿ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ನಾಳೆ ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚಿಸಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಭೈರತಿ ಬಸವರಾಜ್ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೋಟಿಸ್ ನೀಡುತ್ತಿದ್ದಂತೆ ಶಾಸಕರು ತಲೆಮರೆಸಿಕೊಂಡಿದ್ದರು.
ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಬೆಂಗಳೂರಿನ ಹಲಸೂರು ವ್ಯಾಪ್ತಿಯಲ್ಲಿ ರೌಡಿ ಶೀಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ. ಬಿಕ್ಲು ಶಿವ ವಿರುದ್ದ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11 ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. 2025 ಜುಲೈ 15 ರಂದು ರಾತ್ರಿ ಮನೆಯ ಮುಂದೆ ನಿಂತಿದ್ದ ವೇಳೆ 8ರಿಂದ 12 ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಿಕ್ಲು ಶಿವನನ್ನು ಕೊಚ್ಚಿ ಕೊಲೆ ಮಾಡಿದ್ದರು. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ ಅವರ ಎದುರೇ ಈ ಹತ್ಯೆ ನಡೆದಿತ್ತು. ದುಷ್ಕೃತ್ಯದ ವಿಡಿಯೋಗಳು ಕೂಡಾ ಬಹಿರಂಗಗೊಂಡಿದ್ದವು.
ಶಾಸಕ ಬೈರತಿ ಬಸವರಾಜ್ ಅವರ ಕುಮ್ಮಕ್ಕಿನಿಂದಲೇ ತನ್ನ ಮಗನ್ನು ಕೊಲೆ ಮಾಡಲಾಗಿದೆ ಎಂದು ಬಿಕ್ಲು ಶಿವ ತಾಯಿ ವಿಜಯಲಕ್ಷ್ಮಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

