ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ 6 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಮುಖ ಆರೋಪಿಯೊಬ್ಬನ ಕಾಲಿಗೆ ಗುಂಡು ಹಾರಿಸಲಾಗಿದೆ.
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಿರಾಳೆ ಮತ್ತು ಗೊಳಗಿ ಕುಟುಂಬಗಳ ನಡುವಿನ ಜಗಳ ವಿಕೋಪಕ್ಕೆ ಹೋಗಿ, 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು, ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮಹೇಶ್ ತಳವಾರ್ನನ್ನು ಬಂಧಿಸಲು ಯತ್ನಿಸಿದಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಹಿನ್ನೆಲೆ: ಈ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲಾಣಗೌಡ ಪಾಟೀಲ್ ಸೇರಿದಂತೆ ಬಂಧಿತ ಆರೋಪಿಗಳನ್ನು ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಪ್ರಕರಣದ ಕುರಿತು ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ತನಿಖೆ ಮುಂದುವರಿದಿದೆ.

