ಬೆಂಗಳೂರು ದಕ್ಷಿಣ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ (JMC)ಸರ್ಕಾರಿ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 20ಕ್ಕೂ ಹೆಚ್ಚು ರೈತರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳು ನೀಡಿದ ದೂರಿನನ್ವಯ ಬಿಡದಿ ಪೊಲೀಸ್ ಠಾಣೆಯಲ್ಲಿ ರೈತರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್ (FIR) ದಾಖಲಿಸಲಾಗಿದೆ. ಸರ್ಕಾರಿ ಕೆಲಸಕ್ಕೆ ಅಡ್ಡಿ, ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ಹಲ್ಲೆ, ಸಾರ್ವಜನಿಕ ಆಸ್ತಿ ಪಾಸ್ತಿ (ವಾಹನ) ಹಾನಿ ಮತ್ತು ಜೀವ ಬೆದರಿಕೆ ಒಡ್ಡಿರುವ ಕಾಯ್ದೆಗಳಡಿ ಮೊಕದ್ದಮೆ ಹೂಡಲಾಗಿದೆ.
ಸಂಬಂಧಿಸಿದಂತೆ ಜಂಟಿ ಭೂಮಾಪನ (JMC) ಪ್ರಕ್ರಿಯೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಮಂಡಲಹಳ್ಳಿಯಲ್ಲಿ ಸರ್ವೆ ಕಾರ್ಯ ಕೈಗೊಳ್ಳಲು ಬಂದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ರೈತರು ನಡೆಸಿದ ಹಲ್ಲೆ ಮತ್ತು ಪ್ರತಿಭಟನೆಯು ಕಾನೂನು ಹೋರಾಟ ಹಾಗೂ ಬಿಗುವಿನ ವಾತಾವರಣಕ್ಕೆ ದಾರಿ ಮಾಡಿಕೊಟ್ಟಿದೆ.
ಬಿಡದಿ ಟೌನ್‌ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಮಂಡಲಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೆಎಂಸಿ ಸರ್ವೆ ನಡೆಸಲು ಕಂದಾಯ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದರು. ಈ ವೇಳೆ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ವೆ ಕಾರ್ಯಕ್ಕೆ ತಡೆಯೊಡ್ಡಿದ ರೈತರ ಗುಂಪು, ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳನ್ನು ಅಟ್ಟಾಡಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.ಕರ್ತವ್ಯದಲ್ಲಿದ್ದ ಸರ್ಕಾರಿ ಅಧಿಕಾರಿಗಳ ವಾಹನಗಳ ಮೇಲೂ ರೈತರು ದಾಳಿ ನಡೆಸಿ, ಹಾನಿ ಉಂಟುಮಾಡಿದ್ದಾರೆ ಎನ್ನಲಾಗಿದೆ.
ಘಟನೆಯ ನಂತರವೂ ಮಂಡಲಹಳ್ಳಿ ಹಾಗೂ ಆಸುಪಾಸಿನ ಗ್ರಾಮಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ರೈತರು ಅಧಿಕಾರಿಗಳ ಕ್ರಮದ ವಿರುದ್ಧ ತೀವ್ರ ಸಂಘಟಿತ ಹೋರಾಟಕ್ಕೆ ಮುಂದಾಗಿದ್ದಾರೆ.
“ನಮಗೆ ಸೂಕ್ತ ಹಿಂಬರಹ ಕೊಡುವವರೆಗೂ ಯಾವುದೇ ಕಾರಣಕ್ಕೂ ಸರ್ವೆ ಮಾಡಲು ಬಿಡುವುದಿಲ್ಲ” ಎಂದು ರೈತರು ಕಠಿಣ ನಿಲುವು ತಳೆದಿದ್ದಾರೆ.
ಪ್ರತಿನಿಧಿಗಳ ಭೇಟಿಗೆ ಒತ್ತಾಯ
ಸ್ಥಳಕ್ಕೆ ಸಂಬಂಧಪಟ್ಟ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಇತ್ಯರ್ಥಪಡಿಸಬೇಕು. ಅಲ್ಲಿಯವರೆಗೆ ಸರ್ವೆ ನಡೆಸಲು ಬಿಡುವುದಿಲ್ಲ ಎಂದು ರೈತ ಸಂಘಟನೆಗಳು ಹಾಗೂ ಸ್ಥಳೀಯರು ಪಟ್ಟು ಹಿಡಿದಿದ್ದಾರೆ.
ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಇಂದು ಜಂಟಿ ಭೂಮಾಪನ ಕಾರ್ಯವನ್ನು ತೀವ್ರ ಪೊಲೀಸ್ ಬಂದೋಬಸ್ತ್ ಮಧ್ಯೆ ಮುಂದುವರಿಸಲಾಗಿದೆ.
ನಿನ್ನೆ ಐಜಿ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿದ್ದರು.ಬೆಂಗಳೂರು ದಕ್ಷಿಣ ವಿಭಾಗದ ಎಸ್ಪಿ ಶ್ರೀನಿವಾಸ್ ಗೌಡ ಅವರು ಜಿಲ್ಲಾಧಿಕಾರಿಯವರಿಂದ ಸರ್ವೆ ಕುರಿತು ಮಾಹಿತಿ ಪಡೆದಿದ್ದು, ಇಂದು ಮತ್ತೆ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸುವ ಸಾಧ್ಯತೆಯಿದೆ.ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆಗಳು ಮರುಕಳಿಸದಂತೆ ಹೆಚ್ವುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ರೈತರ ಬೇಡಿಕೆಗಳು ಮತ್ತು ಪಟ್ಟು
ಯೋಜನೆಗೆ ಭೂಮಿ ನೀಡುವುದರ ವಿರುದ್ಧ ರೈತ ಸಂಘಟನೆಗಳು ಮತ್ತು ಸ್ಥಳೀಯರು ಒಗ್ಗಟ್ಟಾಗಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ತಮಗೆ ಅಧಿಕೃತವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಅಥವಾ ಸೂಕ್ತ ಹಿಂಬರಹ ನೀಡುವವರೆಗೂ ಯಾವುದೇ ಕಾರಣಕ್ಕೂ ಸರ್ವೆ ಮಾಡಲು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ತೀವ್ರ ವಿರೋಧದ ನಡುವೆಯೂ ಸರ್ಕಾರ ಸರ್ವೆ ನಡೆಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ರೈತರ ಹಿತರಕ್ಷಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಮಧ್ಯಸ್ಥಿಕೆ ವಹಿಸಿ ರೈತರೊಂದಿಗೆ ಸಂಧಾನ ಸಭೆ ನಡೆಸುವುದು ಸದ್ಯದ ಅನಿವಾರ್ಯತೆಯಾಗಿದೆ.

