ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸಭೆ ಭಾನುವಾರ ಸಂಜೆ 5 ಗಂಟೆಗೆ ನಡೆಯಲಿದೆ. ರೈತರಿಗೆ ಅತಿವೃಷ್ಟಿ ಪರಿಹಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮತ್ತಿತರ ವಿಷಯಗಳ ಬಗ್ಗೆ ಕೈಗೊಳ್ಳಬೇಕಾದ ಹೋರಾಟದ ಕುರಿತಾಗಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಬಸವರಾಜ್ ಬೊಮ್ಮಾಯಿ, ವಿಧಾನಸಭೆ ಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟದ ಜೊತೆಗೆ ರಾಜಕೀಯ ಹೋರಾಟ ನಡೆಸುವ ಬಗ್ಗೆ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದಾರೆ. ಅತಿವೃಷ್ಟಿ ಪೀಡಿತ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸುವ ನಿರೀಕ್ಷೆ ಇದೆ. ಇಂದಿನ ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.