ಹುಬ್ಬಳ್ಳಿ: ರಾಜ್ಯದ ಬಜೆಟ್ ಮಂಡನೆ ನಂತರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಹೈಕಮಾಂಡ್ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ಹೈಕಮಾಂಡ್ ಚಿಂತನೆ ನಡೆಸಿದ್ದು, ಶೇಕಡ 50ರಷ್ಟು ಸಚಿವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕೆಂದು ಪಕ್ಷದ ನಾಯಕರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಮನವಿಗೆ ನಾಯಕರು ಸ್ಪಂದಿಸುವ ವಿಶ್ವಾಸವಿದೆ. ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಕಳೆದ 22 ವರ್ಷಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಬಜೆಟ್ ಮಂಡನೆ ಬಳಿಕ ಸಂಪುಟ ವಿಸ್ತರಣೆಯಾಗುವ ಸಂಭವ ಇದ್ದು, ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

