ಬೆಂಗಳೂರು: ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ(ಜಾತಿ ಗಣತಿ) ವಿಚಾರವಾಗಿ ಇಂದು ಮಧ್ಯಾಹ್ನ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಲಿಖಿತವಾಗಿ ಸಲ್ಲಿಕೆಯಾಗಲಿದೆ.
ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೂಡ ಜಾತಿ ಗಣತಿ ಮಾಡುವುದಾಗಿ ಘೋಷಿಸಿರುವುದರಿಂದ ರಾಜ್ಯದ ಜಾತಿ ಗಣತಿ ವರದಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ. ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟ ಸಭೆ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಏಪ್ರಿಲ್ 17ರಂದು ನಡೆದ ಜಾತಿ ಗಣತಿ ವರದಿ ಕುರಿತು ವಿಶೇಷ ಸಂಪುಟ ಸಭೆಯಲ್ಲಿ ಕೆಲವು ಸಚಿವರು ವರದಿಯ ಕುರಿತು ಆಕ್ಷೇಪಿಸಿದ್ದ ಹಿನ್ನೆಲೆಯಲ್ಲಿ ಆಕ್ಷೇಪ ಮತ್ತು ಅಭಿಪ್ರಾಯಗಳನ್ನು ಲಿಖಿತವಾಗಿ ಸಲ್ಲಿಸಲು ಸಚಿವರಿಗೆ ಸೂಚಿಸಲಾಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ಸಚಿವರ ಅಭಿಪ್ರಾಯ ಸಲ್ಲಿಕೆಯಾಗಲಿದ್ದು, ಇದಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ಕೂಡ ಜನಗಣತಿ ಜೊತೆಗೆ ಜಾತಿಗಣತಿ ನಡೆಸುವುದಾಗಿ ಘೋಷಿಸಿದೆ. ಹೀಗಾಗಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ಜಾತಿವಾರು ಸಮೀಕ್ಷಾ ವರದಿಯ ಭವಿಷ್ಯವೇನು ಎನ್ನುವುದರ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯದೊಂದಿಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.