BIG NEWS : ಇಂದಿನಿಂದ ರಾಜ್ಯಾದ್ಯಂತ ‘CET’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಜರುಗಲಿದೆ.

ಏಪ್ರಿಲ್ 16 ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಯಾವುದೇ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರಗಳು ಇರುವುದಿಲ್ಲ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ವಸ್ತ್ರ ಸಂಹಿತೆ ಪಾಲನೆಗೆ ಸೂಚನೆ

  • ಸಿಇಟಿ ಪರೀಕ್ಷೆ ಬರೆಯುವ ಪುರುಷ, ಮಹಿಳಾ ಅಭ್ಯರ್ಥಿಗಳು ವಸ್ತ್ರ ಸಂಹಿತೆ ಪರಿಪಾಲನೆ ಮಾಡಬೇಕು. ಪುರುಷ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಪೂರ್ಣತೋಳಿನ ಶಟ್ಗಳನ್ನು ಅನುಮತಿಸಲಾಗುವುದಿಲ್ಲ, ಅರ್ಧತೋಳಿನ ಶರ್ಟ್ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಸಾಧಾರಣ ಶರ್ಟ್, ಟೀ ಶರ್ಟ್ ಧರಿಸಬೇಕು. ಕುರ್ತಾ ಪೈಜಾನು, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಜೇಬುಗಳು ಇಲ್ಲದಿರುವ, ಕಮ್ಮಿ ಜೇಬುಗಳಿರುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಧರಿಸಬೇಕು. ಬಟ್ಟೆಗಳು ಹಗುರವಾಗಿರಬೇಕು. ಜಿಪ್ ಪಾಕೆಟ್ಗಳು, ಪಾಕೆಟ್ಗಳು, ದೊಡ್ಡ ಬಟನ್ಗಳು ಮತ್ತು ವಿಸ್ತಾರವಾದ ಕಸೂತಿ ಬಟ್ಟೆಗಳಿರಬಾರದು. ಪರೀಕ್ಷಾ ಕೊಠಡಿಯಲ್ಲಿ ಶೂಗಳು ನಿಷಿದ್ದವಾಗಿದ್ದು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗದ ಚಪ್ಪಲಿಗಳನ್ನು ಧರಿಸಬೇಕು. ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರಗಳು, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು

ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ಗಳು ಅಥವಾ ಬಟನ್ಗಳನ್ನು ಹೊಂದಿರುವ ಬಟ್ಟೆಗಳ ಧರಿಸುವುದು ನಿಷಿದ್ದ, ಪೂರ್ಣ ತೋಳಿನ ಬಟ್ಟೆ, ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಮುಜುಗರವಾಗದಂತೆ ಮತ್ತು ವಸ್ತ್ರ ಸಂಹಿತೆಯಂತೆ ಬಟ್ಟೆ ಧರಿಸಬೇಕು. ಹೀಲ್ಡ್ ಚಪ್ಪಲಿ, ಶೂಗಳನ್ನು ಧರಿಸಬಾರದು, ತೆಳುವಾದ ಅಡಿಪಾಯವಿರುವ ಚಪ್ಪಲಿ ಧರಿಸಬೇಕು. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಲೋಹದ ಆಭರಣ ಧರಿಸುವಂತಿಲ್ಲ.

ಎಲೆಕ್ಟ್ರಾನಿಕ್ಸ್ ವಸ್ತುಗಳ ನಿಷೇಧ :

ಡ್ರೆಸ್ ಕೋಡ್ ಜೊತೆಗೆ ಎಲೆಕ್ಟ್ರಾನಿಕ್ಸ್ ವಸ್ತುಗಳು, ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂಥ್, ಕೈ ಗಡಿಯಾರಗಳನ್ನು ಕೊಠಡಿಗೆ ತರುವಂತಿಲ್ಲ. ತಿನ್ನಬಹುದಾದ ವಸ್ತುಗಳನ್ನು ತರುವಂತಿಲ್ಲ, ಬಣ್ಣದ ಹಾಗೂ ಲೋಹದ ಕುಡಿಯುವ ನೀರಿನ ಬಾಟಲಿಗೂ ಅನುಮತಿ ಇಲ್ಲ, ಕೇಂದ್ರದಲ್ಲಿಯೇ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ.

ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್, ಲಾಗ್ ಟೇಬಲ್ ಕೇಂದ್ರದೊಳಗೆ ತರುವಂತಿಲ್ಲ. ತಲೆಯ ಮೇಲೆ ಟೋಪಿ ಧರಿಸುವಂತಿಲ್ಲ ಹಾಗೂ ಮುಖ ಮುಚ್ಚುವಂತೆ ಮಾಸ್ಕ್ ಧರಿಸುವಂತಿಲ್ಲ.

ಅನುಮತಿಸಲಾದ ವಸ್ತುಗಳು

ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಪತ್ರವನ್ನು ಕಡ್ಡಾಯವಾಗಿ ತರಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಪರೀಕ್ಷಾ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.

ಪರೀಕ್ಷಾ ಕೇಂದ್ರ ಪ್ರವೇಶ ಅವಧಿ:

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಕನಿಷ್ಠ ಮೊದಲ ಬೆಲ್ ಆಗುವ 2 ಗಂಟೆ ಮುಂಚಿತವಾಗಿ ಹಾಜರಿರಬೇಕು. ಕೇಂದ್ರದಲ್ಲಿ ಕೊಠಡಿ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳ ಮುಖವನ್ನಾಧರಿಸಿ ಆಫ್ ಮೂಲಕ ಗುರುತು ಪತ್ತೆ ಮಾಡುವ ಕಾರ್ಯ ನಡೆಯಲಿದೆ. ಮತ್ತು ಎಲ್ಲಾ ಅಭ್ಯರ್ಥಿಗಳ ಸಂಪೂರ್ಣ ತಪಾಸಣೆ ನಡೆಯುವುದರಿಂದ ಮೊದಲ ಬೆಲ್ ಆಗುವ ಮುನ್ನ 2 ಗಂಟೆಗಳ ಕಾಲ ಮುಂಚಿತವಾಗಿ ಕೇಂದ್ರದಲ್ಲಿರಬೇಕು. ಬೆಳಗ್ಗೆ 10.20 ಕ್ಕೆ ಮತ್ತು ಮಧ್ಯಾಹ್ನ 2.20 ಕ್ಕೆ ಮೊದಲ ಬೆಲ್ ಆಗಲಿದೆ.ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳ ಪ್ರಾಂಶುಪಾಲರು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read