ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿ ಅರ್ಹರಿಗೆ ಹೊಸದಾಗಿ ಕಾರ್ಡ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ತಲಾದಾಯದಲ್ಲಿ ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಕರ್ನಾಟಕ ರಾಜ್ಯವಿದ್ದರೂ ಬಿಪಿಎಲ್ ಕಾರ್ಡ್ ಪಡೆದವರು ಶೇಕಡ 80ಕ್ಕೂ ಹೆಚ್ಚು ಕುಟುಂಬಗಳಿವೆ. ಇದು ಗಂಭೀರ ವಿಷಯವಾಗಿದ್ದು, ನಿಯಮಗಳ ಅನ್ವಯ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಷ್ಕರಣೆ ಮಾಡದಿರುವುದೇ ಇದಕ್ಕೆ ಕಾರಣ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಈ ಬಗ್ಗೆ ಸೂಚನೆ ನೀಡಿ, ನೌಕರರು ಸೇರಿ ಅನರ್ಹ ಫಲಾನುಭವಿಗಳನ್ನು ಪತ್ತೆ ಮಾಡಿ ಅಂತಹವರ ಬಿಪಿಎಲ್ ಕಾರ್ಡ್ ರದ್ದುಪಡಿಸಬೇಕು. ಅರ್ಹ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ನೀಡಬೇಕು. ತಕ್ಷಣವೇ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುವ ಕೆಲಸ ಮಾಡಿ ಎಂದು ತಿಳಿಸಿದ್ದಾರೆ. ಹೊಸ ನ್ಯಾಯಬೆಲೆ ಅಂಗಡಿಗಳ ಹಂಚಿಕೆಯಲ್ಲಿ ಪರಿಶಿಷ್ಟರಿಗೆ ಆದ್ಯತೆ ನೀಡಬೇಕು. ಆಹಾರ ಧಾನ್ಯ ಸರಬರಾಜು ಮಾಡುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕ್ ಕಡ್ಡಾಯ ಮಾಡಬೇಕು. ಎಲ್ಲಾ ಗೋದಾಮಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ನಿಗಮದಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ತಿಳಿಸಿದ್ದಾರೆ