ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಸಂಪುಟ ಸಭೆ ಕರೆದಿದ್ದಾರೆ.
ಏಪ್ರಿಲ್ 24ರಂದು ವಿಶೇಷ ಸಂಪುಟ ಸಭೆ ನಿಗದಿಯಾಗಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದ್ದು, ಒಳ ಮೀಸಲಾತಿ ಸಂಬಂಧ ಸುದೀರ್ಘ ಚರ್ಚೆಯಾಗುವ ಸಾಧ್ಯತೆ ಇದೆ.
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಬಗ್ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೈಜ್ಞಾನಿಕವಾಗಿ ಒಳಮಿಸಲಾತಿ ಜಾರಿಗೊಳಿಸಲು ಸೂಕ್ತ ಶಿಫಾರಸು ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು.
ಈ ಮೀಸಲಾತಿ ವರ್ಗೀಕರಣ ಬಗ್ಗೆ ವೈಜ್ಞಾನಿಕವಾಗಿ ಚರ್ಚಿಸಿ ಅನುಷ್ಠಾನಗೊಳಿಸಲು ತಾಂತ್ರಿಕ ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವ ಸಮಿತಿ ನೀಡುವ ಶಿಫಾರಸುಗಳ ಆಧಾರದ ಮೇಲೆ ಏಪ್ರಿಲ್ 24ರಂದು ನಡೆಯುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಕುರಿತು ಚರ್ಚೆಗೆ ನಿರ್ಧರಿಸಲಾಗಿದೆ.

