ಬೆಂಗಳೂರು: ರಾಜ್ಯದಲ್ಲಿ ಪೋಡಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಪೋಡಿ ಮುಕ್ತವಾಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಆಯೋಜಿಸಿದ್ದ 36ನೇ ರಾಷ್ಟ್ರೀಯ ಭೂಮಾಪನ ದಿನಾಚರಣೆಯಲ್ಲಿ ಅವರು ಮಾತನಾಡಿ, ಪೋಡಿ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಪೂರಕವಾಗಿ 227 ಪರವಾನಿಗೆ ಭೂಮಾಪಕರನ್ನು ಕಾಯಂ ಮಾಡಲಾಗುವುದು. ಸರ್ವೆ ಇಲಾಖೆಯಲ್ಲಿ ಖಾಲಿ ಇರುವ 36 ಸಹಾಯಕ ನಿರ್ದೇಶಕರನ್ನು ನೇಮಕ ಮಾಡಲಾಗುವುದು ಎಂದು ಘೋಷಿಸಿದ್ದಾರೆ.
ಪೋಡಿ ಮುಕ್ತ ಅಭಿಯಾನ ನಡೆಸಿದರೂ ಇನ್ನು ಅನೇಕ ಗ್ರಾಮಗಳಲ್ಲಿ ಪೋಡಿ ಸಮಸ್ಯೆ ನಿವಾರಣೆಯಾಗಿಲ್ಲ. ಹೀಗಾಗಿ ಸರ್ವೆ ಕಾರ್ಯ ಪೂರ್ಣಗೊಳಿಸಿ ದಾಖಲೆಗಳನ್ನು ಸರಿಪಡಿಸಿ ಪೋಡಿ ಮುಕ್ತ ಗ್ರಾಮವನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕೆರೆಗಳ ಒತ್ತುವರಿ ಪತ್ತೆ ಮಾಡಲು ರಾಜ್ಯ ಎಲ್ಲಾ ಕೆರೆಗಳ ಸರ್ವೆ ನಡೆಸಿ ಒತ್ತುವರಿ ತೆರವುಗೊಳಿಸಬೇಕು. ಇದಕ್ಕಾಗಿ ಸರ್ವೇ ಇಲಾಖೆ ಸೂಕ್ತ ರೀತಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.