ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಉಂಟಾಗಿರುವ ಗೊಂದಲ ಬಗೆಹರಿಸಲು ಕಾನೂನು ಇಲಾಖೆ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲು ಕಾಲೇಜು ಶಿಕ್ಷಣ ಇಲಾಖೆ ತೀರ್ಮಾನ ಕೈಗೊಂಡಿದೆ.
ಯುಜಿಸಿ ನಿಯಮಗಳ ಅನುಸಾರ ಅರ್ಹತೆ ಹೊಂದಿದ ಮತ್ತು ಅರ್ಹತೆ ಇಲ್ಲದ ಅತಿಥಿ ಉಪನ್ಯಾಸಕರ ನಡುವೆ ನಡೆಯುತ್ತಿರುವ ತಿಕ್ಕಾಟ ಬಗೆಹರಿಸಲು ಶುಕ್ರವಾರ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಚಿವರು ಚರ್ಚೆ ನಡೆಸಿದ್ದರು. ಆದರೆ, ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ.
ಅಡ್ವೊಕೇಟ್ ಜನರಲ್ ಅವರಿಂದ ಕಾನೂನು ಅಭಿಪ್ರಾಯ ಪಡೆದ ನಂತರವೇ ಪರಿಹಾರ ಕಲ್ಪಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಶನಿವಾರ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾನೂನು ಸಂಸದೀಯ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳು ಅಡ್ವೊಕೇಟ್ ಜನರಲ್ ಅವರೊಂದಿಗೆ ಆನ್ಲೈನ್ ಮೂಲಕ ಸಭೆ ನಡೆಸಲು ಉದ್ದೇಶಿಸಿದ್ದರು. ಆದರೆ, ಕಾರಣಾಂತರದಿಂದ ಸಭೆ ರದ್ದಾಗಿದೆ. ಇದರಿಂದಾಗಿ ಕಾನೂನು ಅಭಿಪ್ರಾಯ ಬರುವವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಿರಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.