ಬೆಂಗಳೂರು : ಧರ್ಮಸ್ಥಳ ಸರಣಿ ಹತ್ಯಾಕಾಂಡ ಕೇಸ್ ಗೆ ಸಂಬಂಧಿಸಿದಂತೆ ಎಸ್ ಐ ಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ ಬರೆದಿದೆ.
ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.
ಕಳೆದ 20 ವರ್ಷದಲ್ಲಿ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದ ಮಹಿಳೆಯರು, ವಿದ್ಯಾರ್ಥಿನಿಯರ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗ ಸರ್ಕಾರಕ್ಕೆ ಪತ್ರ ಬರೆದಿದೆ. ಧರ್ಮಸ್ಥಳ ವ್ಯಾಪ್ತಿಯಲ್ಲಿ 20 ವರ್ಷಗಳಿಂದ ನಾಪತ್ತೆ ಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು, ರೇಪ್ & ಮರ್ಡರ್ ಪ್ರಕರಣಗಳ ನಿಷ್ಪಕ್ಷ ಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಬೇಕು ಎಂದು ಮನವಿ ಮಾಡಿದ್ದಾರೆ.
ಮೃತದೇಹಗಳನ್ನು ತಾನು ರಹಸ್ಯವಾಗಿ ವಿಲೇವಾರಿ ಮಾಡಿದ್ದಾಗಿ ವ್ಯಕ್ತಿಯೊಬ್ಬರು ವಕೀಲರ ಮೂಲಕ ದೂರು ನೀಡಿದ್ದು, ಈ ಬಗ್ಗೆ ಧರ್ಮಸ್ಥಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಧರ್ಮಸ್ಥಳ ಗ್ರಾಮದಲ್ಲಿ ಹಿಂದಿನಿಂದ ಕೆಲ ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಜೀವಬೆದರಿಕೆಯೊಡ್ಡಿ, ಸದ್ರಿ ಅಪರಾಧ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಹಲವಾರು ಮೃತದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪಪ್ರಜ್ಞೆ ಕಾಡುತ್ತಿರುವುದರಿಂದ ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕ ರಕ್ಷಣೆ ದೊರೆತ ಕೂಡಲೇ ಈ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿಗಳನ್ನು ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರುಗೆ ತೋರಿಸುವುದಾಗಿ ಪೊಲೀಸ್ ಅಧೀಕ್ಷಕರ ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಕೋರ್ಟ್ ನಿಂದ ಅಗತ್ಯ ಅನುಮತಿ ಪಡೆದು ಧರ್ಮಸ್ಥಳ ಠಾಣೆಯಲ್ಲಿ ಬಿಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ದೂರುದಾರರು ತನ್ನ ಹೆಸರು ಹಾಗೂ ಮಾಹಿತಿಯನ್ನು ಗೌಪ್ಯವಾಗಿಡುವಂತೆ ವಿನಂತಿಸಿರುವ ಹಿನ್ನೆಲೆಯಲ್ಲಿ ದೂರುದಾರರ ಮಾಹಿತಿ ನೀಡಲಾಗಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.