ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಡಿ ರಚಿಸಲಾಗಿರುವ 5 ನಗರ ಪಾಲಿಕೆಗಳಿಗೆ ನವೆಂಬರ್, ಡಿಸೆಂಬರ್ ವೇಳೆಗೆ ಚುನಾವಣಾ ನಡೆಸುವ ಬಗ್ಗೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಬಿಬಿಎಂಪಿ, ಬಿಡಿಎ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಮಂಗಳವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪ್ರಮುಖವಾಗಿ ಜಿಬಿಎ ಅಡಿಯಲ್ಲಿ ರಚಿಸಲಾದ 5 ನಗರ ಪಾಲಿಕೆಗಳ ಚುನಾವಣೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಆಗಸ್ಟ್ 4ರಂದು ಸುಪ್ರೀಂ ಕೋರ್ಟ್ಗೆ ಚುನಾವಣೆ ಕುರಿತಂತೆ ಅಫಿಡವಿಟ್ ಸಲ್ಲಿಸಬೇಕಿದ್ದು, ನವೆಂಬರ್, ಡಿಸೆಂಬರ್ ನಲ್ಲಿ ಚುನಾವಣೆ ನಡೆಸುವ ಬಗ್ಗೆ ಅಫಿಡವಿಟ್ ಸಿದ್ಧಪಡಿಸಬೇಕು. ನವೆಂಬರ್ ತಿಂಗಳೊಳಗೆ ವಾರ್ಡ್ ರಚನೆ, ಗಡಿ ಗುರುತಿಸುವಿಕೆ, ವಾರ್ಡ್ ಮೀಸಲಾತಿ ಪಟ್ಟಿ ಸಿದ್ಧಪಡಿಸಿ ಚುನಾವಣೆಗೆ ಬೇಕಾದ ಉಳಿದ ಸಿದ್ಧತೆಗಳ ಬಗ್ಗೆ ಸ್ಪಷ್ಟ ಮಾಹಿತಿ ಇರುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆ ನೀಡಿದ್ದಾರೆ.