ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶಕ್ಕೆ ಮೊದಲು ನೀರು, ವಿದ್ಯುತ್ ಸಂಪರ್ಕ ಕೋರಿ ಮಾರ್ಚ್ ವರೆಗೆ ಅರ್ಜಿ ಸಲ್ಲಿಸಿರುವ ಕಟ್ಟಡಗಳಿಗೆ ಓಸಿ, ಸಿಸಿಯಿಂದ ವಿನಾಯಿತಿ ನೀಡುವ ಬಗ್ಗೆ ಕಾನೂನಿನ ಸಾಧ್ಯತೆಗಳ ಕುರಿತು ಕೂಲಂಕಷವಾಗಿ ಪರಿಶೀಲಿಸಲು ಸರ್ಕಾರ ಮುಂದಾಗಿದೆ.
ಸುಪ್ರೀಂಕೋರ್ಟ್ 2024ರ ಡಿಸೆಂಬರ್ 17ರಂದು ನೀಡಿದ ಆದೇಶದಂತೆ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿರ್ಮಿಸಿದ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಎದುರಾಗಿರುವ ಸಮಸ್ಯೆಗಳ ಬಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವು ದೇಶದ ಎಲ್ಲಾ ರಾಜ್ಯಗಳಿಗೆ ಅನ್ವಯವಾಗುತ್ತದೆ. ಈ ಆದೇಶವನ್ನು ಎಲ್ಲಾ ರಾಜ್ಯಗಳು ಪಾಲಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದ್ದು, ಅಕ್ಟೋಬರ್ 8ರಂದು ಮುಖ್ಯ ಕಾರ್ಯದರ್ಶಿ, ಸಂಬಂಧಿಸಿದ ಇಲಾಖೆಗಳ ಸಚಿವರು ಹಾಗೂ ಅಡ್ವೊಕೇಟ್ ಜನರಲ್ ಅವರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಓಸಿ, ಸಿಸಿ ಇಲ್ಲದ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.