ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆ ಆಳಂದ ಕ್ಷೇತ್ರದ ಮತ ಕಳವು ಯತ್ನ ಕೃತ್ಯದ ಹಿಂದೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುಭಾಷ್ ಗುತ್ತೇದಾರ್ ಹಾಗೂ ಅವರ ಪುತ್ರನ ಪಾತ್ರವಿದೆ ಎಂದು ವಿಶೇಷ ತನಿಖಾ ತಂಡ(ಎಸ್ಐಟಿ) ಶುಕ್ರವಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಬೆಂಗಳೂರಿನ ಎಸಿಎಂಎಂ ಕೋರ್ಟ್ ಗೆ 22,000 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಮತ ಕಳವು ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ ಅವರ ಪುತ್ರ ಹರ್ಷಾನಂದ ಗುತ್ತೇದಾರ ಹಾಗೂ ಪಶ್ಚಿಮ ಬಂಗಾಳ ಮೂಲದ ಆದ್ಯ ಸೇರಿ 7ಮಂದಿಯನ್ನು ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ.
ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಮತ ಕಳವು ನಡೆದಿದೆ ಎಂದು ಆರೋಪಿಸಿದ್ದರು. ಆಳಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ಬಗ್ಗೆ ಆರೋಪ ಮಾಡಿದ್ದರು. ರಾಜ್ಯ ಸರ್ಕಾರ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚಿಸಿದ್ದು, ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಬಂಧನ ಭೀತಿ ಹಿನ್ನೆಲೆಯಲ್ಲಿ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.
