ಬೆಂಗಳೂರು: ಬಹುನಿರೀಕ್ಷಿತ ಜಾತಿ ಗಣತಿ ವರದಿಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡುವ ಸಾಧ್ಯತೆ ಇದೆ. ವರದಿ ಮಂಡನೆಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿ ಗಣತಿ ವರದಿ -2015) ಚರ್ಚೆಯಲ್ಲಿದ್ದು, ಇಂದು ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು ವರದಿಗೆ ಬಹುತೇಕ ಅನುಮೋದನೆ ದೊರೆಯುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬರೋಬ್ಬರಿ 169 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರದಿಯನ್ನು ಸಿದ್ಧಪಡಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಿಎಂ ಇದನ್ನು ಮಂಡಿಸಲಿದ್ದಾರೆ. ವರದಿಯಲ್ಲಿನ ಅಂಶಗಳ ಬಗ್ಗೆ ಸಂಪುಟ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸುವ ಅಗತ್ಯವಿಲ್ಲ ಎಂದು ಸಂಪುಟ ಸಭೆ ನಿರ್ಧರಿಸಿದರೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಇವತ್ತೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.