ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ವಿಶೇಷ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆ 3ರ ಅನುಷ್ಠಾನದ ಬಗ್ಗೆ ಸಮಾಲೋಚನೆ ನಡೆಸಲಾಗುವುದು.
ಕೃಷ್ಣಾ ಮೇಲ್ದಂಡೆ ಯೋಜನೆಯ ರೂಪುರೇಷೆ ಸಿದ್ಧಪಡಿಸಲು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಯುಕೆಪಿ ಭಾಗದ ಮುಖಂಡರು, ರೈತರನ್ನು ಕರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದ್ದರು. ಕಳೆದ 15 ದಿನಗಳಲ್ಲಿ ಎರಡು ಮೂರು ಸಭೆಗಳನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ 3ಕ್ಕೆ 75,000 ಎಕರೆ ಭೂಮಿ ಅಗತ್ಯವಿದೆ. ಯೋಜನೆ ಪೂರ್ಣಗೊಳಿಸಬೇಕಾದರೆ ರೈತರನ್ನು ವಿಶ್ವಾಸಕ್ಕೆ ಪಡೆಯಬೇಕು. ಭೂಸ್ವಾಧೀನ ಪ್ರಕ್ರಿಯೆಗೆ ಅಪಾರ ಪ್ರಮಾಣದ ಪರಿಹಾರ ಧನ ಬೇಕಾಗುತ್ತದೆ.
ತಾಂತ್ರಿಕ ಕಾರಣಗಳಿಂದ ಇನ್ನೂ ಅಂತಿಮ ನಿರ್ಧಾರಕ್ಕೆ ಸರ್ಕಾರ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ವಿಶೇಷ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ರೈತ ನಾಯಕರು ವ್ಯಕ್ತಪಡಿಸಿರುವ ಅಭಿಪ್ರಾಯಗಳ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು.
ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿತ್ತು. ಹಲವಾರು ಪ್ರಕ್ರಿಯೆ ಸ್ಪಷ್ಟಗೊಳಿಸಬೇಕಾದ ಹಿನ್ನೆಲೆಯಲ್ಲಿ ಇಂದು ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.