ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-2 ರ ಕುರಿತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಪರೀಕ್ಷಾ ಸಂಬಂಧ ಕೈಗೊಗೊಳ್ಳಬೇಕಾಗಿರುವ ವಿವಿಧ ವಿಷಯಗಳ ಕುರಿತು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
2025 ದ್ವಿತೀಯ ಪಿಯುಸಿ ಪರೀಕ್ಷೆ – 1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2 ಅಥವಾ ಪರೀಕ್ಷೆ-3 ಕ್ಕೆ ಮಂಡಳಿಯ ನಿಯಮಾನುಸಾರ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಮಕ್ಕಳು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈಗಾಗಲೇ ಎರಡನೇ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇಲಾಖೆಯಿಂದ ವಿದ್ಯಾರ್ಥಿಗಳನ್ನು ಸಿದ್ದಪಡಿಸಲು ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ಅಣುಕು ಪರೀಕ್ಷೆಗಳನ್ನು ನೆಡಸಲಾಗುತ್ತಿದ್ದು ಇದರ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳು ಗಮನಹರಿಸಬೇಕು. ಜೊತೆಗೆ ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ವಿದ್ಯಾರ್ಥಿಗಳ ಪೋಷಕರು ಮಕ್ಕಳ ಪರೀಕ್ಷೆ ಬರೆಯಲು ಹೆಚ್ಚಿನ ಕಾಳಜಿ ವಹಿಸುವಂತೆ ತಿಳಿಸಿದರು.
ವಿಶೇಷವಾಗಿ ವಲಸೆ ಕಾರ್ಮಿಕರ ಮಕ್ಕಳನ್ನು ಗಮನಹರಿಸಿ ಅವರನ್ನು ಗುರುತಿಸಿ ಕಡ್ಡಾಯವಾಗಿ ಪರೀಕ್ಷೆಗೆ ಹಾಜರುಪಡಿಸಲು ಬೇಕಾದ ಎಲ್ಲಾ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.ಈ ವರ್ಷದ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಪರೀಕ್ಷೆ ಬರೆಯಬಹುದಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಲಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಿಯಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಪದವಿ ಪೂರ್ವ ನಿರ್ದೇಶಕರಾದ ಸಿಂಧೂ ಬಿ ರೂಪೇಶ್, ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾದ ಬಸವರಾಜೇಂದ್ರ, ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ ಹೆಚ್.ಎನ್ ಗೋಪಾಲಕೃಷ್ಣ ಉಪಸ್ಥಿತರಿದ್ದರು.