ಬೆಂಗಳೂರು : ರಾಜ್ಯ ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ನನ್ನ ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಏರುವುದು ಜಾಗತಿಕ ದಾಖಲೆಯಾಗಿದೆ ಎಂದು ಥಾವರ್ ಚಂದ್ ಗೆಲ್ಹೋಟ್ ಹೇಳಿದ್ದಾರೆ.
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, 6. ಸರ್ಕಾರವು ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವನಿಧಿ ಎಂಬ ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಮತ್ತು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದರು.
ಸರ್ಕಾರವು ಖಾತರಿ ಯೋಜನೆಗಳ ಮೂಲಕ ಜನರ ಜೀವನದಲ್ಲಿ ಪರೋಕ್ಷವಾಗಿ ಗಮನಾರ್ಹ ಬದಲಾವಣೆಗಳನ್ನು ಗಮನಿಸುತ್ತಿದೆ. ರಾಜ್ಯದಲ್ಲಿ ಬರಗಾಲವಿದ್ದರೂ ಕಳೆದ ವರ್ಷಕ್ಕಿಂತ ನಮ್ಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಕಡಿಮೆಯಾಗಿದೆ. ಯಾವುದೇ ಕಾರಣಕ್ಕೂ ಯಾವುದೇ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂಬ ನಂಬಿಕೆಯೊಂದಿಗೆ ನನ್ನ ಸರ್ಕಾರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ (ಫ್ಯೂಚರಿಸ್ಟಿಕ್) ಸರ್ಕಾರ. ನಮ್ಮ ಎಲ್ಲ ಯೋಜನೆಗಳು ಈ ರಾಜ್ಯದ ಸಮಸ್ತ ಜನತೆಯ ಪಾಲಿಗೆ ಸಂತೃಪ್ತಿಯ ಮತ್ತು ನೆಮ್ಮದಿಯ ನಾಳೆಗಳನ್ನು ತರುವ ಉದ್ದೇಶ ಹೊಂದಿವೆ. ನಮ್ಮ ನೀತಿಗಳಲ್ಲಿ ಹೊಸತನವನ್ನು ಅಳವಡಿಸಿಕೊಳ್ಳಲಾಗಿದೆ. ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ, ಕೈಗಾರಿಕೆ ಮತ್ತು ಸೇವಾ ರಂಗಗಳಲ್ಲಿ ಹೊಸ ಭರವಸೆಗಳನ್ನು ಹುಟ್ಟು ಹಾಕಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಹಾಗೂ ಜೀವನ ಭದ್ರತೆಯನ್ನು ಕಲ್ಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ನನ್ನ ಸರ್ಕಾರವು ಕೈಗೊಂಡಿದೆ ಎಂದು ಹೇಳಿದರು.