ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗಾಗಿ 2025- 26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನದಲ್ಲಿ 13,433 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ.
ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ 2025- 26 ನೇ ಸಾಲಿನಲ್ಲಿ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆಯಡಿ ನೀಡಲಾಗಿರುವ 42,000 ಕೋಟಿ ರೂ. ಅನುದಾನದ ಪೈಕಿ 5 ಗ್ಯಾರಂಟಿ ಯೋಜನೆಗಳಿಗೆ 13,433 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದು. ದಲಿತರಿಗೆ ಮೀಸಲಾದ ಹಣವನ್ನು ಅನ್ಯ ಕಾರಣಕ್ಕೆ ಏಕೆ ಬಳಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ದಲಿತರಿಗೆ ಮಾಡುತ್ತಿರುವ ದ್ರೋಹ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.