ಬೆಂಗಳೂರು: ನಟ ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವುದನ್ನು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಖಂಡಿಸಿದ್ದಾರೆ.
ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶೋಭ ಕರಂದ್ಲಾಜೆ ಅವರು, ವಿಷ್ಣು ಸಮಾಧಿ ಸ್ಥಳವನ್ನು ಸಾಧೀನಪಡಿಸಿಕೊಂಡು ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿದ್ದಾರೆ.
ಕನ್ನಡ ಚಿತ್ರರಂಗಕ್ಕೆ ಡಾ. ವಿಷ್ಣುವರ್ಧನ್ ಅವರ ಕೊಡುಗೆ ಕುರಿತು ಇಡೀ ಕರುನಾಡಿನ ಮನೆ ಮನಗಳು ಮಾತನಾಡುತ್ತವೆ. ಎಲ್ಲರ ಮನೆ ಮಾತಾದ ಅಂತಹ ಅದ್ಭುತ ನಟ ಶ್ರೇಷ್ಠರಿಗೆ ಸೂಕ್ತ ಗೌರವ ನೀಡಲಾಗದೆ ಅವರ ಸಮಾಧಿ ಸ್ಥಳ ಉಳಿಸಿಕೊಳ್ಳಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾಧಿ ಸ್ಥಳದ ಅಭಿಮಾನ್ ಸ್ಟುಡಿಯೋ ಭಾಗವನ್ನು ರಾತ್ರೋರಾತ್ರಿ ಕೆಡವಿ ಅಸಂಖ್ಯಾತ ಅಭಿಮಾನಿಗಳಿಗೆ ನೋವುಂಟು ಮಾಡಲಾಗಿದೆ. ವಿಷ್ಣುವರ್ಧನ್ ಸಮಾಧಿ ಸ್ಥಳದ ಭೂಮಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೂಡಲೇ ಜಾಗದ ಮಾಲೀಕರಿಂದ ಸ್ವಾಧೀನಪಡಿಸಿಕೊಳ್ಳಬೇಕು. ಜಾಗದ ಮಾಲೀಕರಿಗೆ ಸರ್ಕಾರಿ ನಿಯಮಾನುಸಾರ ಪರಿಹಾರ ನೀಡಬೇಕು. ಸ್ಮಾರಕವನ್ನು ಕಾಪಾಡುವುದಲ್ಲದೆ ಅದನ್ನು ಕಲೆ ಸಂಸ್ಕೃತಿಯ ಪ್ರತೀಕವಾಗಿ, ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ.