ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್ಐಆರ್) ಪ್ರಕ್ರಿಯೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪರಿಷ್ಕರಿಸಿದೆ. ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆ ವಿತರಣೆ ಹಾಗೂ ವಾಪಸ್ ಪಡೆಯಲು ಆಗಸ್ಟ್ 8 ಕೊನೆಯ ದಿನವಾಗಿತ್ತು. ಅದನ್ನು ಆಗಸ್ಟ್ 17ರ ವರೆಗೆ ವಿಸ್ತರಿಸಲಾಗಿದೆ.
ಭಾರತ ಚುನಾವಣಾ ಆಯೋಗ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಕುರಿತು 2026ರ ಆಗಸ್ಟ್ 7ರಂದು ಹೊರಡಿಸಿದ ಅಧಿಸೂಚನೆಯ ಪ್ರಕಾರ, 01.10.2026 ಅನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಮತದಾರರ ಪಟ್ಟಿಯ ತಿದ್ದುಪಡಿ ಪ್ರಕ್ರಿಯೆಯನ್ನು ನವೀಕರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ, ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡುವ ಕಾರ್ಯವು ಜೂನ್ 30ರಿಂದ ಆಗಸ್ಟ್ 17ರವರೆಗೆ ನಡೆಯಲಿದೆ. ಆಗಸ್ಟ್ 17ರಂದು ಮತಗಟ್ಟೆಗಳ ಮರುಹೊಂದಾಣಿಕೆ ಕಾರ್ಯ ನಡೆಯಲಿದ್ದು, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ದೂರುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ. ಈ ದೂರುಗಳ ಪರಿಶೀಲನೆ ಮತ್ತು ತೀರ್ಮಾನ ಪ್ರಕ್ರಿಯೆ ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ನಡೆಯಲಿದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು ಪ್ರಕಟಿಸಲಾಗುತ್ತದೆ.
ಚುನಾವಣಾ ಆಯೋಗವು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಈ ಪರಿಷ್ಕೃತ ವೇಳಾಪಟ್ಟಿಯನ್ನು ತಿಳಿಸುವಂತೆ ಸೂಚಿಸಿದ್ದು, ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮತ್ತು ರಾಜಕೀಯ ಪಕ್ಷಗಳಿಗೆ ಮಾಹಿತಿಯನ್ನು ವ್ಯಾಪಕವಾಗಿ ಹಂಚಿಕೊಳ್ಳುವಂತೆ ನಿರ್ದೇಶಿಸಿದೆ.


