ನವದೆಹಲಿ: ರಾಜ್ಯದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರೆಸುವಂತೆ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಹೈಕೋರ್ಟ್ ದಿಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠ ನೇಮಕಾತಿ ಪ್ರಕ್ರಿಯೆಯಿಂದ ಉಂಟಾಗುವ ಸೇವಾ ಸಂಬಂಧಿತ ದೂರುಗಳನ್ನು ಬಗೆಹರಿಸಲು ಕೆಎಸ್ಎಟಿ ಸೂಕ್ತ ವೇದಿಕೆ ಎಂದು ತಿಳಿಸಿದೆ.
2023ರ ಅಕ್ಟೋಬರ್ 13 ರಂದು ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸಿದ್ದ ಆಗಿನ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ದ್ವಿಸದಸ್ಯ ಪೀಠ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಇಲ್ಲದ ಅಭ್ಯರ್ಥಿಗಳು ತಮ್ಮ ತಕರಾರನ್ನು ನ್ಯಾಯ ಮಂಡಳಿ ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿತ್ತು.
ಏಕ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ವಿಭಾಗೀಯ ಪೀಠ ಸರಿಯಾಗಿಯೇ ರದ್ದುಗೊಳಿಸಿದೆ. ಮೇಲ್ಮನವಿ ಭಾಗಶಃ ಅನುಮತಿಸುವಲ್ಲಿ ವಿಷಯವನ್ನು ನ್ಯಾಯ ಮಂಡಳಿಗೆ ವರ್ಗಾಯಿಸುವ ಸಂದರ್ಭದಲ್ಲಿ ಯಾವುದೇ ಲೋಪವಾಗಿಲ್ಲ ಎಂದು ನ್ಯಾಯಮೂರ್ತಿ ವಿಜಯ್ ಬಿಷ್ಣೋಯ್ ಹೇಳಿದ್ದಾರೆ.
ಆರರಿಂದ ಎಂಟನೇ ತರಗತಿಯವರೆಗೆ 13,352 ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ 2022ರ ಮಾರ್ಚ್ 21ರಂದು ಅಧಿಸೂಚನೆ ಹೊರಡಿಸಿತ್ತು. 2022ರ ಮೇನಲ್ಲಿ ಲಿಖಿತ ಪರೀಕ್ಷೆ ನಡೆಸಿ ನವೆಂಬರ್ 18ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ವಿವಾಹಿತ ಮಹಿಳೆಯ ಪತಿಯ ಆದಾಯ ಪ್ರಮಾಣ ಪತ್ರ ಪರಿಗಣಿಸಲಾಗಿತ್ತು. ವಿವಾಹಿತ ಮಹಿಳೆಯರು ಪತಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕೆಂಬ ಬಗ್ಗೆ ನೇಮಕಾತಿ ಅಧಿಸೂಚನೆಯಲ್ಲಿ ಸ್ಪಷ್ಟ ನಿರ್ದೇಶನ ಇರಲಿಲ್ಲ. ಅರ್ಹತೆ ಇದ್ದರೂ ನೇಮಕಾತಿ ಪಟ್ಟಿಯಿಂದ ನಮ್ಮನ್ನು ಕೈ ಬಿಡಲಾಗಿದೆ ಎಂದು ಆರೋಪಿಸಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಅವಕಾಶ ಪಡೆಯದವರು ಹೈಕೋರ್ಟ್ ಮೊರೆ ಹೋಗಿದ್ದರು. ಮಹಿಳೆಯ ತಂದೆಯ ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಬೇಕು ಎಂದು ಏಕ ಸದಸ್ಯ ಪೀಠ ಆದೇಶಿಸಿ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿತ್ತು. ಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿಯನ್ನು ಸರ್ಕಾರ ಪರಿಷ್ಕರಣೆ ಮಾಡಿದ್ದು, ಮೊದಲ ಪಟ್ಟಿಯಲ್ಲಿದ್ದ 451 ಅಭ್ಯರ್ಥಿಗಳನ್ನು ಹೊಸ ಪಟ್ಟಿಯಲ್ಲಿ ಕೈ ಬಿಡಲಾಗಿತ್ತು. ಪ್ರಕರಣ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದು, ಏಕ ಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ರದ್ದು ಮಾಡಿತ್ತು.