ಚನ್ನರಾಯಪಟ್ಟಣ: ಪ್ರತಿವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲಿ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ಇದನ್ನು ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಹೃದಯಾಘಾತಕ್ಕೆ ಕಾರಣ ಮತ್ತು ಮುಂಜಾಗ್ರತೆ ಕ್ರಮಗಳ ಕುರಿತಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡು ಜಾಗೃತಿ ಮೂಡಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡಿದೆ. ಹಾಸನ ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಸಾವಿನ ಪ್ರಕರಣಗಳ ತನಿಖೆ ಹಾಗೂ ಮಾಹಿತಿ ಪಡೆಯಲು ಹೃದ್ರೋಗ ತಜ್ಞರ ತಂಡವನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.