ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಕಾಯ್ದೆಯನ್ವಯ ನೇಮಕಾತಿ ಮುಂದುವರಿಸಲು ಸರ್ಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಇದರಿಂದಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಪೈಕಿ 3644 ಹುದ್ದೆಗಳ ನೇಮಕಾತಿಗೆ ಇದ್ದ ಸದ್ಯಕ್ಕೆ ನಿವಾರಣೆಯಾದಂತಾಗಿದೆ.
ರಾಜ್ಯದಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಕಾಯ್ದೆ 2022ರ ಅನ್ವಯ ಈಗಾಗಲೇ ಆರಂಭಿಸಿದ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆ ಮುಂದುವರೆಸಲು ಸರ್ಕಾರಕ್ಕೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ. 50 ರಿಂದ 55ಕ್ಕೆ ಹೆಚ್ಚಳ ಮಾಡಿರುವುದನ್ನು ಆಕ್ಷೇಪಿಸಿ ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರು ಇದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆದಿದೆ.
ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿ ನೀಡುವಂತಿಲ್ಲ. ಕಾಯ್ದೆ ಅನ್ವಯ ಈಗಾಗಲೇ ಆರಂಭಿಸಿದ ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆ ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ. ಈ ಮಾರ್ಪಾಡು 2025 ರ ನವೆಂಬರ್ 19ರ ಮಧ್ಯಂತರ ಆದೇಶಕ್ಕೆ ಮಾತ್ರ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.
