ಬೆಂಗಳೂರು: ರಾಜ್ಯ ಸರ್ಕಾರದ ಸಿ ವೃಂದ ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ಕೇಂದ್ರ ನಾಗರಿಕ ಸೇವಾ ಅಧಿಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ ವರ್ಗಕ್ಕೆ ತರಬೇತಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಉದ್ದೇಶಕ್ಕಾಗಿ ರಾಜ್ಯ ನಾಗರಿಕ ಸೇವಾ ಮುಂಬಡ್ತಿಗಾಗಿ ತರಬೇತಿ ಕಡ್ಡಾಯ ನಿಯಮಗಳು -2025 ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ಕಲ್ಪಿಸಿ ನಂತರ ಅಂತಿಮ ಅಧಿಸೂಚನೆ ಹೊರಡಿಸಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.