ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಲ್ಲಿ 2016 – 2020ರ ಅವಧಿಯಲ್ಲಿ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಬರುವ ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ. ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗಳಿಗೆ ಸರ್ಕಾರವು 160 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

