ಬೆಂಗಳೂರು: ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ.ಕೆ. ಸುಧಾಕರ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸುಧಾಕರ್ ಅವರ ಮನೆಯಲ್ಲಿ 4.8 ಕೋಟಿ ರೂಪಾಯಿ ಪತ್ತೆಯಾಗಿದ್ದು, ಈ ಹಣ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣ ರದ್ದು ಕೋರಿ ಸುಧಾಕರ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್ ಅವರಿದ್ದ ಏಕ ಸದಸ್ಯ ಪೀಠ ಎಫ್ಐಆರ್ ರದ್ದುಗೊಳಿಸಿ ಆದೇಶ ಪ್ರಕಟಿಸಿದೆ.
ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂ. ಜಪ್ತಿ ಮಾಡಿದ್ದರು. ಈ ಹಣ ಸುಧಾಕರ್ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಸಂಗ್ರಹಿಸಿದ್ದ ಆರೋಪ ಕೇಳಿ ಬಂದಿತ್ತು.
ಚುನಾವಣಾ ನೀತಿ ಸಂಹಿತೆ ಜಾರಿ ರಾಜ್ಯ ನೋಡಲ್ ಅಧಿಕಾರಿಯಾಗಿದ್ದ ಮುನೀಶ್ ಮೌದ್ಗಿಲ್ ಅವರಿಗೆ ಸುಧಾಕರ್ ವಾಟ್ಸಾಪ್ ಮೆಸೇಜ್ ಮಾಡಿದ್ದರು ಎಂದು ಹೇಳಲಾಗಿತ್ತು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಚುನಾವಣಾ ಅಧಿಕಾರಿಗಳು ದೂರು ನೀಡಿದ್ದರು. ಪೊಲೀಸರು ವಿಚಾರಣೆ ನಡೆಸಿ ನೆಲಮಂಗಲ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಸುಧಾಕರ್ ಹೈಕೋರ್ಟ್ಗೆ ಮನವಿ ಮಾಡಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಎಫ್ಐಆರ್ ರದ್ದು ಮಾಡಿದೆ.