ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಕಂಟೇನರ್ ಲಾರಿ ಎದುರಿನಿಂದ ಬರುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಬಸ್ ಗೆ ಬೆಂಕಿ ತಗುಲಿ 11 ಮಂದಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 9 ಮಂದಿ ಗಂಭೀರವಾಗಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಐಜಿಪಿ ರವಿಕಾಂತೇಗೌಡ ಹಾಗೂ ಎಸ್ಪಿ ರಂಜನ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

