ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆ ಮುಕ್ತಾಯವಾಗಿದ್ದು, ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಎಂದು ಶಾಸಕರು ಹೇಳಿಕೆ ನೀಡಿದ್ದಾರೆ.
ಬಿಕ್ಲು ಶಿವ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಇಂದು ಭಾರತಿ ನಗರ ಠಾಣೆಯಲ್ಲಿ ಶಾಸಕ ಭೈರತಿ ಬಸವರಾಜ್ ಹಾಜರಾಗಿದ್ದು, ಪೊಲೀಸರು ಕೇಳಿರುವ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.
ವಿಚಾರಣೆ ಬಳಿಕ ಠಾಣೆಯಿಂದ ಹೊರಬಂದ ಭೈರತಿ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಿಕ್ಲು ಶಿವ ಕೊಲೆ ಕೇಸ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಕೊಲೆ ಕೇಸ್ ನಲ್ಲಿ ನನ್ನ ಪಾತ್ರವಿಲ್ಲ ಎಂದು ಹೇಳಿದರು. ಪೊಲೀಸರು ವಿಚಾರಣೆಗೆ ಕರೆದಿದ್ದರು. ಹಾಗಾಗಿ ವಿಚಾರಣೆಗೆ ಹಾಜರಾಗಿದ್ದೆ. ಎಸಿಪಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ. ಕೊಲೆ ಕೇಸ್ ನಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ. ಜುಲೈ 23ಕ್ಕೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದರು.