ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಬೃಹತ್ ಪಾದಯಾತ್ರೆಗೆ ಮುಹೂರ್ತ ಫಿಕ್ಸ್ ಮಾಡಿದೆ.
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಈಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದು, 10 ದಿನಗಳ ಕಾಲ ರಾಯಚೂರಿನಿಂದ ಬಳ್ಳಾರಿವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದರು. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಪಾದಯಾತ್ರೆಗೆ ಜೆಡಿಎಸ್ನವರು ಸಹ ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು.
190 ಕಿ.ಮೀ.ನಿಂದ 200 ಕಿ.ಮೀ. ಪಾದಯಾತ್ರೆಗೆ ನಿರ್ಧರಿಸಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸಮಾರೋಪದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭಾಗಿಯಾಗ್ತಾರೆ. ನಾಗೇಂದ್ರ ರಾಜೀನಾಮೆ, ಮೀಸಲಾತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ, ಬರ, ಖಾಲಿ ಹುದ್ದೆ ಭರ್ತಿ ಸೇರಿ ಹಲವು ವಿಚಾರ ತೆಗೆದುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.
ಪಾದಯಾತ್ರೆ ಮಾರ್ಗ:
ರಾಯಚೂರು ಜಿಲ್ಲೆಯ ಗುರುಗುಂಟದಿಂದ ಪಾದಯಾತ್ರೆ ಆರಂಭವಾಗಲಿದ್ದು, ಗುರುಗುಂಟ- ಲಿಂಗಸೂಗೂರು – ಮಸ್ಕಿ – ಸಿಂಧನೂರು -ಶಿರಗುಪ್ಪ- ತೆಕ್ಕಲಕೋಟೆ- ಸಿಂದಗೇರಿ ಮಾರ್ಗವಾಗಿ ಬಳ್ಳಾರಿ ತಲುಪಲಿದೆ. 8 ರಿಂದ 9 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ನಾಲ್ಕು ಎಸ್ಟಿ ಕ್ಷೇತ್ರಗಳ ಮೂಲಕ ಸಾಗಲಿದೆ.
ಇನ್ನು ಪಾದಯಾತ್ರೆ ವಿಚಾರವಾಗಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರು ಮಹತ್ವದ ಸಭೆ ನಡೆಸಿದ್ದು, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜನಾರ್ದನ ರೆಡ್ಡಿ, ಡಾ. ಶೈಲೇಂದ್ರ ಬೆಲ್ದಾಳೆ, ಮಾನಪ್ಪ ವಜ್ಜಲ್, ಶಿವರಾಜ್ ಪಾಟೀಲ್, ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಎಂಎಲ್ ಸಿಸಿ.ಟಿ.ರವಿ, ಮಾಜಿ ಸಚಿವ ಶ್ರೀರಾಮುಲು, ರಾಜುಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

