HomeIndiaಕೇರಳ ವಿಧಾನಸಭೆ ಚುನಾವಣೆ 2026: ಶೋಭಾ ಕರಂದ್ಲಾಜಗೆ ಮಹತ್ವದ ಜವಾಬ್ದಾರಿ

ಕೇರಳ ವಿಧಾನಸಭೆ ಚುನಾವಣೆ 2026: ಶೋಭಾ ಕರಂದ್ಲಾಜಗೆ ಮಹತ್ವದ ಜವಾಬ್ದಾರಿ

ಬಿಜೆಪಿಯ ನೂತನ  ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್ ನಬಿನ್ 5 ರಾಜ್ಯಗಳ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದ್ದಾರೆ. ಕೇರಳ ವಿಧಾನಸಭೆ ಚುನಾವಣೆಗೆ ಉಸ್ತುವಾರಿ ಮತ್ತು ಸಹ ಉಸ್ತುವಾರಿಯನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

ಏಪ್ರಿಲ್‌ನಲ್ಲಿ ಕೇರಳ ರಾಜ್ಯದ 140 ಸದಸ್ಯ ಬಲದ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈಗಾಗಲೇ ವಿವಿಧ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆ ಗೆದ್ದು ಭಾರೀ ಉತ್ಸಾಹದಲ್ಲಿರುವ ಬಿಜೆಪಿ ಕೇರಳ ಚುನಾವಣೆಯಲ್ಲಿಯೂ ಹೆಚ್ಚು ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿದೆ.

ಉಸ್ತುವಾರಿಗಳ ನೇಮಕ: ಬಿಜೆಪಿಯ ಅಧ್ಯಕ್ಷ ನಿತಿನ್ ನಬಿನ್ ಕೇರಳ ರಾಜ್ಯದ ಚುನವಣಾ ಉಸ್ತುವಾರಿಯಾಗಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ನೇಮಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ, ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇರಳ ಚುನಾವಣೆಗೆ ಸಹ ಉಸ್ತುವಾರಿಯಾಗಿದ್ದಾರೆ. ತತ್‌ಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕ ಮಾಡಲಾಗಿದೆ ಎಂದು ಪಕ್ಷದ ಪ್ರಕಟಣೆ ಹೇಳಿದೆ.

ಕೇರಳದಲ್ಲಿ ಬಿಜೆಪಿ ಪ್ರಭಾವ ಹೊಂದಿಲ್ಲ. ಎಲ್‌ಡಿಎಫ್ ಮತ್ತು ಯುಡಿಎಫ್‌ ಸರ್ಕಾರ ಅಲ್ಲಿ ರಚನೆಯಾಗುತ್ತದೆ. ಆದರೆ ಈ ಬಾರಿ ಕೇರಳ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ.

2021ರ ವಿಧಾನಸಭೆ ಚುನಾವಣೆಯಲ್ಲಿ ಸಿಪಿಐ(ಎಂ) 62, ಕಾಂಗ್ರೆಸ್ 21, ಸಿಪಿಐ 17, ಐಉಎಂಎಲ್ 15, 6 ಪಕ್ಷೇತರರು, 19 ಇತರರು ಗೆಲುವು ಸಾಧಿಸಿದ್ದರು. ಚುನಾವಣೆ ಫಲಿತಾಂಶದ ಬಳಿಕ ಎಡಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರ ರಚನೆ ಮಾಡಿತ್ತು. ಸತತ ಎರಡು ಚುನಾವಣೆಗಳಲ್ಲಿ ಜಯಗಳಿಸುವ ಮೂಲಕ ಎಲ್‌ಡಿಎಫ್ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಕೇರಳದ ಬಿಜೆಪಿ ರಾಜ್ಯಾಧ್ಯಕ್ಷರು ಕೇಂದ್ರ ಮಾಜಿ ಸಚಿವ ರಾಜೀವ್ ಚಂದ್ರಶೇಖರ್. ಇತ್ತೀಚೆಗೆ ನಡೆದ ಕೇರಳ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು ಸಾಧಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದೆ. ವಿ.ವಿ.ರಾಜೇಶ್ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

101 ಸದಸ್ಯ ಬಲದ ಪಾಲಿಕೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 50 ಸೀಟುಗಳನ್ನು ಗೆದ್ದು ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಗೆಲುವು ಕೇರಳ ಬಿಜೆಪಿ ವಿಧಾನಸಭೆ ಚುನಾವಣೆ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ.

ಈಗ ಏಪ್ರಿಲ್/ ಮೇ ತಿಂಗಳಿನಲ್ಲಿ ನಡೆಯುವ ಕೇರಳ ವಿಧಾನಸಭೆ ಚುನಾವಣೆಗೆ ಎಲ್‌ಡಿಎಫ್, ಯುಡಿಎಫ್ ಮತ್ತು ಇತರ ಪಕ್ಷಗಳು ತಯಾರಿ ಆರಂಭಿಸಿವೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಈ ಬಾರಿಯ ಚುನಾವಣೆಯನ್ನು ಗೆಲ್ಲುವ ಉತ್ಸಾಹದಲ್ಲಿದೆ.

ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 10 ಸೀಟುಗಳನ್ನಾದರೂ ಗೆಲ್ಲಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ. ಆದ್ದರಿಂದ ಈಗ ಚುನಾವಣೆಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ: ಕೇರಳ ವಿಧಾನಸಭೆ ಸಹ ಉಸ್ತುವಾರಿಯಾಗಿ ನೇಮಕಗೊಂಡಿರುವ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯ ಸಹ-ಉಸ್ತುವಾರಿ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ನಮ್ಮ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಗೃಹಮಂತ್ರಿಗಳಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ನಾವು ನಮ್ಮ ಸಂಕಲ್ಪದೊಂದಿಗೆ ದೃಢವಾಗಿದ್ದೇವೆ. ಪ್ರತಿ ಸಮರ್ಪಿತ ಕಾರ್ಯಕರ್ತರೊಂದಿಗೆ, ‘ವಿಕಸಿತ ಕೇರಳ’ದ ಕನಸನ್ನು ನನಸಾಗಿಸಲು ಶ್ರಮಿಸುತ್ತೇವೆ ಮತ್ತು ‘ವಿಕಸಿತ ಭಾರತ’ ನಿರ್ಮಾಣಕ್ಕೆ ಕೊಡುಗೆ ನೀಡುತ್ತೇವೆ.

ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರು ಆರಂಭಿಸಿರುವ ಯೋಜನೆಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವುದು ಮತ್ತು ಅವರ ಜನಪರ ಆಡಳಿತದ ಸಂದೇಶವನ್ನು ಪ್ರತಿಯೊಬ್ಬ ನಾಗರಿಕರಿಗೂ ತಲುಪಿಸುವುದು ನಮ್ಮ ಆದ್ಯತೆಯಾಗಿದೆ. ಉತ್ತಮ ಆಡಳಿತದ ಯುಗವನ್ನು ಪ್ರಾರಂಭಿಸಲು ದೊರಕುವ ಯಾವುದೇ ಅವಕಾಶವನ್ನು ಬಿಡುವುದಿಲ್ಲ. ಒಟ್ಟಾಗಿ, ವಿಕಸಿತ ಭಾರತಕ್ಕಾಗಿ ವಿಕಸಿತ ಕೇರಳದ ಸಂಕಲ್ಪವನ್ನು ನಾವು ಸಾಕಾರಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular