ಬೆಂಗಳೂರು: ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರಿಂದ ನಡೆದ ದೌರ್ಜನ್ಯ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ರಾಜಧಾನಿ ಬೆಂಗಳೂನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರಿಂದ ನಡೆದ ಹಲ್ಲೆ ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ, ಮಾತಿನ ಚಕಮಕಿ ನಡೆದಿದ್ದು, ನೂಕುನುಗ್ಗಲು ಆರಂಭವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಘು ಲಾಠಿಚಾರ್ಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

