ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಣದ ಲೂಟಿ ಪ್ರಕರಣದಲ್ಲಿ ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಭ್ರಷ್ಟರನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲು ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಪಾದಯಾತ್ರೆಯ ಮಾರ್ಗಸೂಚಿ ಮತ್ತು ಪೋಸ್ಟರ್‌ಗಳನ್ನು ಇಂದು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಸಿ.ಟಿ. ರವಿ, ಜನಾರ್ದನ ರೆಡ್ಡಿ, ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ ನಾಯಕ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕರಾದ ದೊಡ್ಡನಗೌಡ ಜಿ. ಪಾಟೀಲ್, ಶಾಸಕರಾದ ಪ್ರಭು ಚೌವ್ಹಾಣ್, ಡಾ. ಶೈಲೇಂದ್ರ ಬೆಲ್ದಾಳೆ, ಮಾನಪ್ಪ ಡಿ. ವಜ್ಜಲ್, ಡಾ. ಎಸ್. ಶಿವರಾಜ್ ಪಾಟೀಲ್, ಹರೀಶ್ ಪೂಂಜ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಎಸ್.ಟಿ. ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಜನರ ಕಲ್ಯಾಣಕ್ಕೆ ಮೀಸಲಾದ ಹಣ ಲೂಟಿಯಾಗಿದ್ದರೂ, ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಭ್ರಷ್ಟ ಸಚಿವರನ್ನು ರಕ್ಷಿಸುವ ಕೆಲಸದಲ್ಲೇ ಕಾಂಗ್ರೆಸ್ ಸರ್ಕಾರ ನಿರತವಾಗಿದೆ. ಭ್ರಷ್ಟರಿಗೆ ರಕ್ಷಣೆ ನೀಡುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ. ಇದು ಕೇವಲ ಪಾದಯಾತ್ರೆಯಲ್ಲ – ಭ್ರಷ್ಟಾಚಾರದ ವಿರುದ್ಧದ ಜನಧ್ವನಿ, ಇದು ಕೇವಲ ಹೋರಾಟವಲ್ಲ – ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧದ ಜನಾಂದೋಲನ ಎಂದು ಆರ್. ಅಶೋಕ್ ತಿಳಿಸಿದ್ದಾರೆ.

