ತಮಿಳುನಾಡು ವಿಧಾನಸಭಾ ಚುನಾವಣೆ 2026ರ ಕುರಿತು ಬಿಗ್ ಅಪ್‌ಡೇಟ್ ಒಂದಿದೆ. ರಾಜ್ಯದ 234 ಸ್ಥಾನಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಘೋಷಣೆಯಾಗಲಿದೆ.
ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟ ವಿಧಾನಸಭೆ ಚುನಾವಣೆ ತಂತ್ರ ಬದಲಿಸಿದೆ. ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಾರಿ ವಿಲ್ಲುಪುರಂ ಜಿಲ್ಲೆಯ ಸಾತ್ತೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ನೈನಾರ್ ನಾಗೇಂದ್ರನ್ ತಿರುನೆಲ್ವೇಲಿ ಕ್ಷೇತ್ರದಿಂದ 2021ರ ಚುನಾವಣೆಯಲ್ಲಿ ಜಯಗಳಿಸಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಅವರು ತಮ್ಮ ಕ್ಷೇತ್ರವನ್ನು ಬದಲಾವಣೆ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಕನ್ಯಾಕುಮಾರಿಯಲ್ಲಿ ಮಾತನಾಡಿದ ಅವರು, “ನಾನು ಸಾತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿಯ ವಿಧಾನಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಬಿಜೆಪಿ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೆ ಹಾಲಿ ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್ ಕ್ಷೇತ್ರ ಬದಲಾವಣೆ ಘೋಷಣೆ ಮಾಡಿದ್ದಾರೆ.
ಮಾಹಿತಿಗಳ ಪ್ರಕಾರ ಗುರುವಾರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ನೈನಾರ್ ನಾಗೇಂದ್ರನ್ ಕ್ಷೇತ್ರ ಬದಲಾವಣೆ ಘೋಷಣೆಯಾಗಿದೆ.
ಬಿಜೆಪಿಯ ಮಹಿಳಾ ಮೋರ್ಚಾ ಅಧ್ಯಕ್ಷೆ ವಾನತಿ ಶ್ರೀನಿವಾಸ್ ಕೂಡ ಕ್ಷೇತ್ರ ಬದಲಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಇದೆ. 2021ರಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಲ್ಲಿ ನಟ ಕಮಲ್ ಹಾಸನ್ ಅವರನ್ನು ಸೋಲಿಸಿ ಅವರು ಸಂಚಲನ ಮೂಡಿಸಿದ್ದರು.
ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆಯ ಬಳಿಕ ಇಬ್ಬರ ಕ್ಷೇತ್ರ ಬದಲಾಗಿದೆ. ಬಿಜೆಪಿಗೆ ತಿರುನೆಲ್ವೇಲಿ ಮತ್ತು ಕೊಯಮತ್ತೂರು ದಕ್ಷಿಣ ಕ್ಷೇತ್ರಗಳನ್ನು ಬಿಟ್ಟುಕೊಡಲು ಪಕ್ಷ ಒಪ್ಪದ ಕಾರಣ ಇಬ್ಬರು ನಾಯಕರ ಕ್ಷೇತ್ರ ಬದಲಾಗಿದೆ.

