ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿರುವುದಕ್ಕೆ ವಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು, ಕಾರ್ಯಕರ್ತರು ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ಮೇಲೆ ಹಲ್ಲೆ, ತಳ್ಳಾಟ ನೂಕಾಟ ಮಾಡಿದ್ದಾರೆಂದು ಪೊಲೀಸ್ ಇನ್‌ಸ್ಪೆಕ್ಟರ್ ಅಭಯ ಪ್ರಕಾಶ್ ದೂರು ನೀಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಸಂತೋಷ್ ಕೊಟ್ಯಾನ್ ಸೇರಿದಂತೆ 40 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಜೆಪಿ ಮಹಿಳಾ ಕಾರ್ಯಕರ್ತರ ಮೇಲೂ ಕೇಸ್ ದಾಖಲಾಗಿದೆ.

