ಬೆಂಗಳೂರು: ಹರಿಹರ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಮಾಡಿದ ಜನಪ್ರತಿನಿಧಿಯ ಮೇಲೆಯೇ ಮೊಟ್ಟೆ ಎಸೆದು, ಹಲ್ಲೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ರೌಡಿಗಳಂತೆ ವರ್ತಿಸಿದ್ದಾರೆ. ಶಾಸಕನ ಮೇಲೆಯೇ ದಾಳಿ ನಡೆಸಿರುವುದು ಗೂಂಡಾಗಳ ವರ್ತನೆಯಾಗಿದೆ. ರಾಜ್ಯದಲ್ಲಿರುವುದು ಗೂಂಡಾ ಸರ್ಕಾರದಂತೆ ಕಾಣುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿ ಮುತ್ತಿಗೆಗೆ ಮುಂದಾಗಿದ್ದ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಶಿವಾಜಿನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುಣ್ಯೇಶ್ ಎಂದು ಗುರುತಿಸಲಾಗಿದೆ. ಈತ ಕಾಟನ್ ಬಾಕ್ಸ್ ನಲ್ಲಿ ಮೊಟ್ಟೆಯನ್ನು ಸಂಗ್ರಹಿಸಿಟ್ಟುಕೊಂಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿ ಕಚೆರಿಬಳಿ ಈತ ಮೊಟ್ಟೆಯನ್ನು ಯಾಕೆ ಇಟ್ಟುಕೊಂಡಿದ್ದ ಹಾಗೂ ಯಾರ ಸೂಚನೆ ಮೇರೆಗೆ ಬಿಜೆಪಿ ಶಾಸಕನ ಮೇಲೆ ಮೊಟ್ಟೆ ದಾಳಿ ನಡೆಸಿದ್ದಾನೆ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಬಂಧಿತ ಆರೋಪಿ ಹಿಂದೆ ಇನ್ನಷ್ಟು ಜನರು ಇರುವ ಸಾಧ್ಯತೆ ಇದೆ. ಆರೋಪಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ನೀಟ್ ಅಕ್ರಮದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಜುಲೈ 22ರಂದು ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿ ಮುತ್ತಿಗೆ ಹಾಕಲು ಮುಂದಾಗಿದ್ದರು. ಈ ವೇಳೆ ಕೆಪಿಸಿಸಿ ಕಚೇರಿ ಬಳಿ ಬಂದ ಹರಿಹ್ಜರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆಗೆ ಯತ್ನಿಸಿದ್ದರು. ಇದೀಗ ಮೊಟ್ಟೆ ಎಸೆದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

