HomeKarnatakaಬೋಟ್ ದುರಂತ: ಮಾರ್ಗಸೂಚಿ ಪ್ರಕಟಿಸಿದ ಉಡುಪಿ ಜಿಲ್ಲಾಡಳಿತ

ಬೋಟ್ ದುರಂತ: ಮಾರ್ಗಸೂಚಿ ಪ್ರಕಟಿಸಿದ ಉಡುಪಿ ಜಿಲ್ಲಾಡಳಿತ

ಉಡುಪಿಯ ಡೆಲ್ಟಾ ಬೀಚ್ ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ ಮೈಸೂರಿನ ಮತ್ತೋರ್ವ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಬೋಟ್ ದುರಂತದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಡಳಿತ ಬೋಟ್‌ಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮತ್ತು ಎಸ್ಪಿ ಹರಿರಾಮ್ ಶಂಕರ್ ಸಭೆ ನಡೆಸಿದ ಬಳಿಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿಯನ್ನು ಪಡೆದೇ ಕಡಲಿಗೆ ಇಳಿಯಬೇಕಿದ್ದು, ಈ ಸಂಬಂಧ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿಯನ್ನು ಪಡೆದುಕೊಳ್ಳತಕ್ಕದ್ದು.

ಮಾರ್ಗಸೂಚಿಗಳು

  • ಅನುಮತಿಯನ್ನು ಪಡೆಯದೇ ಇರುವ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಅನುಮತಿ ಪಡೆದ ಪ್ರವಾಸಿ ಬೋಟ್‌ಗಳು ಪ್ರತೀ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕಾಗಿರುತ್ತದೆ.
  • ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಠಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು.
  • ಪ್ರವಾಸಿ ಬೋಟ್‌ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.
  • ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಉದ್ದೇಶಕ್ಕೆ ಬಳಸುವ ಪ್ರವಾಸಿ ಬೋಟ್ ಮಾಲೀಕರುಗಳ ಸಭೆಯನ್ನು ಶೀಘ್ರದಲ್ಲಿ ಕರೆದು ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಪರವಾನಿಗೆಯನ್ನು ಪಡೆಯುವಂತೆ, ಪ್ರವಾಸಿ ಬೋಟ್‌ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸಲಾಗುತ್ತದೆ.
  • ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವ ಬಗ್ಗೆ, ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular