ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತರಿಂದ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ದಾವಣಗೆರೆಯ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದರಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಇಲಾಖೆಯ ಸಹಾಯವಾಣಿ 112ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಇನ್ನು 45 ನಿಮಿಷದಲ್ಲಿ ಜಿಲ್ಲಾಧಿಕಾರಿಯ ಮನೆ ಸ್ಪೋಟಿಸುವುದಾಗಿ ಹೇಳಿ ಕರೆ ಕಡಿತಗೊಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ತಕ್ಷಣವೇ ಡಿಸಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಜಿಲ್ಲಾಧಿಕಾರಿಗಳ ನಿವಾಸ, ಕಾರ್, ಕಾರಿನ ಶೆಡ್, ಕಾಂಪೌಂಡ್ ಸೇರಿ ಮನೆಯ ಪ್ರತಿಯೊಂದು ಸ್ಥಳದಲ್ಲಿ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಕಂಡು ಬಂದಿಲ್ಲ. ಇದೊಂದು ಹುಸಿ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಕರೆ ಮಾಡಿದ ವ್ಯಕ್ತಿ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

