ಬೆಂಗಳೂರು: ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕೇಂದ್ರ ಕಚೇರಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರಲ್ಲಿ ಆತಂಕ ಮೂಡಿಸಿದೆ. ಇ-ಮೇಲ್ನಲ್ಲಿ ಮಧ್ಯಾಹ್ನ 2 ಗಂಟೆಗೆ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಸಂಜಯನಗರ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಗೆ ಇಂದು ಮಧ್ಯಾಹ್ನ 1 ಗಂಟೆಗೆ ಬೆದರಿಕೆ ಇ-ಮೇಲ್ ಬಂದಿದೆ. ಮಾಹಿತಿ ದೊರೆಯುತ್ತಿದ್ದಂತೆಯೇ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ (BDDS), ಶ್ವಾನ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಇಸ್ರೋ ಕಚೇರಿ ಆವರಣದಲ್ಲಿ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಗಮನಾರ್ಹವಾಗಿ, ಜುಲೈ 2ರಂದು ಕೂಡ ಇದೇ ರೀತಿಯ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಆ ವೇಳೆ ವ್ಯಾಪಕ ತಪಾಸಣೆ ನಡೆಸಿದ ನಂತರ ಅದು ಹುಸಿ ಬೆದರಿಕೆ ಎಂದು ದೃಢಪಟ್ಟಿತ್ತು. ಆ ಪ್ರಕರಣದ ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಇದೀಗ ಮತ್ತೊಂದು ಬೆದರಿಕೆ ಇ-ಮೇಲ್ ಬಂದಿರುವುದು ತನಿಖಾಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.
ಪ್ರಸ್ತುತ ಇ-ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಮತ್ತು ಸೈಬರ್ ತಜ್ಞರು ತನಿಖೆ ಮುಂದುವರಿಸಿದ್ದು, ಬೆದರಿಕೆಯ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.

