ಚಿತ್ರದುರ್ಗ: ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ನಿಂತಿದ್ದ ಜನರ ಮೇಲೆ ಹರಿದ ಪರಿಣಾಮ ಓರ್ವ ಯುವಕ ಮೃತಪಟ್ಟಿದ್ದು, ಮಹಿಳೆಯೊಬ್ಬರ ಕಾಲು ಮುರಿದಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಫುಟ್ಪಾತ್ ಮೇಲೆ ನಿಂತಿದ್ದವರ ಮೇಲೆ ಹರಿದಿದೆ.ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯ ಕಾಲಿಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೇಗವಾಗಿ ಬಂದ ಕಾರು ಏಕಾಏಕಿ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ರಕ್ಷಣೆ ಕಾರ್ಯದಲ್ಲಿ ಪಾಲ್ಗೊಂಡರು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಾರು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

