ಬೆಂಗಳೂರು: ಏಳನೇ ವೇತನ ಆಯೋಗ ಸೌಲಭ್ಯ, ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಕೆಜಿಐಡಿ, ಜಿಪಿಎಫ್ ಸೌಲಭ್ಯ ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮಹಾನಗರ ಪಾಲಿಕೆಗಳ ನೌಕರರು ಸ್ಥಗಿತಗೊಳಿಸಿದ್ದಾರೆ.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಜು. 15ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ 10 ಮಹಾನಗರ ಪಾಲಿಕೆಗಳ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ಜುಲೈ 15ರಂದು ಮಂಗಳವಾರ ಮಹಾನಗರ ಪಾಲಿಕೆಗಳ ನೌಕರರು, ಸಿಬ್ಬಂದಿಯ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಹೀಗಾಗಿ ಮುಷ್ಕರ ಅಂತ್ಯಗೊಳಿಸಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಪಾಲಿಕೆಗಳ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸಚಿವರು ಪತ್ರ ಬರೆದಿದ್ದಾರೆ.
ಸಚಿವರ ಮನವಿಯ ಮೇರೆಗೆ ಮಹಾನಗರ ಪಾಲಿಕೆ ನೌಕರರ ಸಂಘದ ಪದಾಧಿಕಾರಿಗಳು ಗೂಗಲ್ ಮೀಟ್ ನಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಸಚಿವರ ಭರವಸೆ ಹಿನ್ನೆಲೆಯಲ್ಲಿ ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ. ಜುಲೈ 15ರಂದು ನಡೆಯುವ ಸಭೆಯಲ್ಲಿ ಬೇಡಿಕೆ ಈಡೇರಿಸದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.