ಬೆಂಗಳೂರು: ದ್ವೇಷ ಭಾಷಣದ ಮೂಲಕ ಸಮಾಜದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ಆ ಮೂಲಕ ಅಮಾಯಕ ಜನರ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡುತ್ತಿದ್ದು, ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕೆಂಬ ಉದ್ದೇಶದೊಂದಿಗೆ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ಮುಂದಿನ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇದು ಕಾಯ್ದೆಯಾಗಿ ಜಾರಿಗೆ ಬಂದ ನಂತರದಿಂದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಕೃತ್ಯ ಎಸಗುವ ವ್ಯಕ್ತಿ ಅಥವಾ ಸಂಘಟನೆಗಳಿಗೆ ಶಿಕ್ಷೆ ವಿಧಿಸಲು ಕಾನೂನಾತ್ಮಕ ಅವಕಾಶ ಲಭ್ಯವಾಗಲಿದೆ. ನಾಡನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸಬೇಕು ಎನ್ನುವ ಸಂಕಲ್ಪ ರಾಜ್ಯ ಸರ್ಕಾರದ್ದಾಗಿದೆ ಎಂದು ಹೇಳಲಾಗಿದೆ.
