ಹಾಸನ: ಟೈರ್ ಸ್ಪೋಟಗೊಂಡು ಚಲಿಸುತ್ತಿದ್ದ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿದ್ದ ಪ್ರಯಾಣಿಸುತ್ತಿದ್ದ ಸುಮಾರು 36 ಪ್ರಯಾಣಿಕರು ಪಾರಾಗಿದ್ದಾರೆ. ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಬಸ್ ನ ಟೈರ್ ಸ್ಪೋಟಗೊಂಡಿದೆ. ಟೈರ್ ಸ್ಪೋಟಗೊಳ್ಳುತ್ತಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಬಸ್ ನಿಲ್ಲಿಸಿದ ಚಾಲಕ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಬಸ್ ನಲ್ಲಿದ್ದ ಹಲವು ಪ್ರಯಾಣಿಕರ ಮೊಬೈಲ್ ಮತ್ತು ಲಗೇಜ್ ಬೆಂಕಿಗಾಹುತಿಯಾಗಿವೆ. ಮಾಹಿತಿ ತಿಳಿದ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

